ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆ: ಸಾರ್ವಜನಿಕವಾಗಿ ಕ್ಷಮೆಯಾಚಿಸದ ಬಿಜೆಪಿ ಸಚಿವನಿಗೆ ಸುಪ್ರೀಂಕೋರ್ಟ್ ತರಾಟೆ
ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ (thenewsminute.com)
ಹೊಸದಿಲ್ಲಿ : ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಅವರು ನ್ಯಾಯಾಲಯದ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ ಎಂದು ಹೇಳಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಸಚಿವರ ನಡವಳಿಕೆಯಿಂದ ಅವರ ಉದ್ದೇಶಗಳು ಮತ್ತು ಪ್ರಾಮಾಣಿಕತೆಯನ್ನು ಅನುಮಾನಿಸುವಂತೆ ಮಾಡಿದೆ ಎಂದು ಹೇಳಿದೆ.
ಕುನ್ವರ್ ವಿಜಯ್ ಶಾ ಪರವಾಗಿ ಹಾಜರಾದ ಹಿರಿಯ ವಕೀಲ ಕೆ.ಪರಮೇಶ್ವರ್, ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ, ಅದು ಆನ್‌ಲೈನ್‌ನಲ್ಲಿ ಲಭ್ಯವಿದೆ. ಈ ಕ್ಷಮೆಯಾಚನೆಯನ್ನೂ ನ್ಯಾಯಾಲಯದ ದಾಖಲೆಯಲ್ಲಿ ಸೇರಿಸಲಾಗುವುದು ಎಂದು ಹೇಳಿದರು.
ಈ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿಗೆ ಆಗಸ್ಟ್ 13ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಪೀಠವು ಸೂಚಿಸಿದೆ.