ಸೇನೆ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ರಾಹುಲ್ ಗಾಂಧಿ (Photo: PTI)
ಹೊಸದಿಲ್ಲಿ: 2022ರ ಭಾರತ್ ಜೋಡೊ ಯಾತ್ರೆಯ ವೇಳೆ ಭಾರತೀಯ ಸೇನೆಯ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನಡೆಸುತ್ತಿದ್ದ ವಿಚಾರಣೆಗೆ ನೀಡಲಾಗಿದ್ದ ತಡೆಯನ್ನು ಗುರುವಾರ ಸುಪ್ರೀಂ ಕೋರ್ಟ್ ಡಿಸೆಂಬರ್ 4ರವರೆಗೆ ವಿಸ್ತರಿಸಿದೆ.
ಈ ಪ್ರಕರಣದ ವಿಚಾರಣೆಗೆ ತಡೆ ನೀಡಿದ ನ್ಯಾ. ಎಂ.ಎಂ.ಸುಂದರೇಶ್ ಹಾಗೂ ನ್ಯಾ. ಸತೀಶ್ ಚಂದ್ರ ಶರ್ಮರನ್ನೊಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ವಿಚಾರಣಾ ನ್ಯಾಯಾಲಯ ತನಗೆ ಜಾರಿ ಮಾಡಿದ್ದ ಸಮನ್ಸ್ ಅನ್ನು ಪ್ರಶ್ನಿಸಿ, ರಾಹುಲ್ ಗಾಂಧಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ, ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಆಗಸ್ಟ್ 24ರಂದು ರಾಹುಲ್ ಗಾಂಧಿಯವರ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣಾ ದಿನಾಂಕದವರೆಗೆ ಲಕ್ನೊದಲ್ಲಿನ ವಿಚಾರಣಾ ನ್ಯಾಯಾಲಯದೆದುರು ಬಾಕಿಯಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು.