ಏರ್ ಇಂಡಿಯಾ ವಿಮಾನ ದುರಂತ ಸಂತ್ರಸ್ತರಿಗೆ ಪರಿಹಾರ ಕೋರಿ ಇಬ್ಬರು ವೈದ್ಯರು ಸುಪ್ರೀಂ ಕೋರ್ಟ್‌ಗೆ ಅರ್ಜಿ
ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ: ಅಹ್ಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿ ಇಬ್ಬರು ವೈದ್ಯರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಸಲ್ಲಿಸಿದ ಅರ್ಜಿಯಲ್ಲಿ ದೂರುದಾರರು ವಿಮಾನ ಅಪಘಾತದ ಕಾರಣಗಳ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹಾಗೂ ಸಂತ್ರಸ್ತರ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಈ ವಿದ್ಯಾರ್ಥಿಗಳು ರಾಷ್ಟ್ರದ ಆರೋಗ್ಯದ ಅಗತ್ಯಗಳನ್ನು ಪೂರೈಸುವ ವೈದ್ಯರಾಗಲು ತರಬೇತಿ ಪಡೆಯುತ್ತಿದ್ದರು. ಅವರ ನಷ್ಟ ಕೇವಲ ವೈಯುಕ್ತಿಕವಲ್ಲ. ಇಡೀ ದೇಶಕ್ಕೆ ನಷ್ಟ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಹಾಗೂ ತ್ವರಿತ ಪರಿಹಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಬಿ.ಜೆ. ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿದ್ದ ನಿವಾಸಿ ವೈದ್ಯರು ಸೇರಿದಂತೆ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ತಲಾ 50 ಲಕ್ಷ ರೂ. ಮಧ್ಯಂತರ ಪರಿಹಾರ ನೀಡುವಂತೆ ಅವರು ವಿನಂತಿಸಿದ್ದಾರೆ.
ವಿಳಂಬವಿಲ್ಲದೆ ಪರಿಹಾರ ಘೋಷಿಸುವುದು ಹಾಗೂ ಮೃತಪಟ್ಟ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗಗಳನ್ನು ನೀಡುವುದು ಸೇರಿದಂತೆ ದೀರ್ಘಾವಧಿಯ ಪುನರ್ವಸತಿ ಯೋಜನೆಗಳನ್ನು ಘೋಷಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಅವರು ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ಅಥವಾ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ವಿಮಾನ ಯಾನ ತಜ್ಞರು, ಅರ್ಥಶಾಸ್ತ್ರಜ್ಞರು ಹಾಗೂ ವಿಮಾ ಲೆಕ್ಕಿಗರನ್ನು ಒಳಗೊಂಡ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರೂಪಿಸಬೇಕು ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಸಮಿತಿ ಅಂತಿಮ ಪರಿಹಾರವನ್ನು ಮೌಲ್ಯಮಾಪನ ಮಾಡುವ ಜವಾಬ್ದಾರಿ ಹೊಂದಿರುತ್ತದೆ ಹಾಗೂ ತ್ರಿವೇಣಿ ಕೊಡ್ಕಾನಿ ವರ್ಸಸ್ ಏರ್ ಇಂಡಿಯಾದಂತಹ ಕಾನೂನಿನ ಪೂರ್ವ ನಿದರ್ಶನಗಳಿಂದ ಮಾರ್ಗದರ್ಶನ ಪಡೆಯುತ್ತದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.