ಸಿದ್ಧಾಂತಕ್ಕಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ: ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕನಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ : ಕೇರಳದ ಪಾಲಕ್ಕಾಡ್‌ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶ್ರೀನಿವಾಸನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಿತೂರಿ ಆರೋಪದಲ್ಲಿ ಬಂಧಿತ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್‌ಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ.
ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಸತ್ತಾರ್ ಸಲ್ಲಿಸಿದ ವಿಶೇಷ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು ಈ ಆದೇಶವನ್ನು ನೀಡಿದೆ.
ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ಓಕಾ, ಸಿದ್ಧಾಂತಕ್ಕಾಗಿ ನೀವು ಯಾರನ್ನಾದರೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು. ʼಇದು ನಾವು ಕಂಡುಕೊಳ್ಳುವ ಟ್ರೆಂಡ್. ಏಕೆಂದರೆ ಅವರು ನಿರ್ದಿಷ್ಟ ಸಿದ್ಧಾಂತವನ್ನು ಅಳವಡಿಸಿಕೊಂಡಿದ್ದಾರೆʼ (ಅವರನ್ನು ಜೈಲಿಗೆ ಹಾಕಲಾಗುತ್ತದೆ) ಎಂದು ಹೇಳಿದರು.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪರ ವಕೀಲರು, ಕೊಲೆಗೆ ಸಂಬಂಧಿಸಿದ ಮುಖ್ಯ ಎಫ್ಐಆರ್‌ನಲ್ಲಿ ಸತ್ತಾರ್ ಹೆಸರಿಲ್ಲದಿದ್ದರೂ, ಪಿಎಫ್ಐ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯಕರ್ತರ ನೇಮಕಾತಿ ಮತ್ತು ಶಸ್ತ್ರಾಸ್ತ್ರ ತರಬೇತಿಗೆ ಅವರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ವಾದಿಸಿದರು.