ಜಾಮೀನು ಅರ್ಜಿಯನ್ನು 27 ಬಾರಿ ಮುಂದೂಡಿದ್ದ ಅಲಹಾಬಾದ್ ಹೈಕೋರ್ಟ್ ವರ್ತನೆಗೆ ಸುಪ್ರೀಂ ಕೋರ್ಟ್ ಅಸಮಾಧಾನ: ಆರೋಪಿಯ ಬಿಡುಗಡೆ
Credit: PTI Photo
ಹೊಸದಿಲ್ಲಿ: ಸಿಬಿಐ ದಾಖಲಿಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯೊಬ್ಬನ ಜಾಮೀನು ಅರ್ಜಿಯನ್ನು 27 ಬಾರಿ ಮುಂದೂಡಿದ್ದ ಅಲಹಾಬಾದ್ ಹೈಕೋರ್ಟ್ ವರ್ತನೆಯ ಬಗ್ಗೆ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆತನಿಗೆ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾ. ಆಗಸ್ಟಿನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ನ್ಯಾಯಪೀಠ, “ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಹೇಗೆ 27 ಬಾರಿ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲು ಸಾಧ್ಯ?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಆರೋಪಿ ಲಕ್ಷ್ಯ ತವರ್ ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಎದುರು ನಡೆಯುತ್ತಿದ್ದ ಈ ಪ್ರಕರಣದ ವಿಚಾರಣೆಯನ್ನೂ ಮುಕ್ತಾಯಗೊಳಿಸಿತು.
ಆರೋಪಿ ಲಕ್ಷ್ಯ ತವರ್ ನ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಅನ್ನೂ ಜಾರಿಗೊಳಿಸಿದ ಸುಪ್ರೀಂ ಕೋರ್ಟ್, ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪದೇ ಪದೇ ವಿಚಾರಣೆ ಮುಂದೂಡಿಕೆಯಾಗಿರುವುದೊಂದೇ ಈಗಿನ ವಿಚಾರಣೆಯ ವಿಷಯ ಎಂದು ಹೇಳಿತು.
ಪ್ರಕರಣದ ವಿಚಾರಣೆಯನ್ನು ಮುಂದೂಡುವುದರ ವಿರುದ್ಧ ಸಲ್ಲಿಕೆಯಾಗುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ವಿಚಾರಣೆಗೆ ಅಂಗೀಕರಿಸುವುದಿಲ್ಲ ಎಂದು ನ್ಯಾಯಪೀಠ ತಿಳಿಸಿತು. ಆದರೆ, “ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಹೈಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಕಿಯಿರಿಸಿಕೊಳ್ಳುವುದು ಹಾಗೂ 27 ಬಾರಿ ವಿಚಾರಣೆಯನ್ನು ಮುಂದೂಡುವುದು ಅಪೇಕ್ಷಣೀಯವಲ್ಲ” ಎಂದು ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿತು.
ಇದಕ್ಕೂ ಮುನ್ನ, ಆರೋಪಿ ಲಕ್ಷ್ಯ ತವರ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಮಾರ್ಚ್ 20ರಂದು ಮುಂದೂಡಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಿಯ ಜಾಮೀನು ಅರ್ಜಿಯನ್ನು ಪರಿಗಣಿಸುವುದಕ್ಕೂ ಮುನ್ನ, ನ್ಯಾಯಾಂಗ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು.