ತಮಿಳುನಾಡು | ಸೆಕ್ಯೂರಿಟಿ ಗಾರ್ಡ್ ಲಾಕಪ್ ಡೆತ್ ಪ್ರಕರಣ : ಕೊಲೆ ಪ್ರಕರಣದಡಿ ಐವರು ಪೊಲೀಸರ ಬಂಧನ
ಅಜಿತ್ ಕುಮಾರ್ (Photo: X)
ಚೆನ್ನೈ: ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಬಂಧಿಸಲಾಗಿದೆ.
ಘಟನೆ ಸಂಬಂಧ ಜೂನ್ 28ರಂದು ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸೋಮವಾರ ತಡರಾತ್ರಿ ಬಿಡುಗಡೆ ಮಾಡಲಾಗಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಚಾಲನೆ ನೀಡಲಾಯಿತು ಹಾಗೂ ಕಳೆದ ರಾತ್ರಿ ಮರಣೋತ್ತರ ಪರೀಕ್ಷಾ ವರದಿಯನ್ನು ಸ್ವೀಕರಿಸಿದ ನಂತರ, ಯಾವುದೇ ವಿಳಂಬವಿಲ್ಲದೆ ಮುಂದಿನ ಕ್ರಮ ಕೈಗೊಳ್ಳಲಾಯಿತು ಎಂದು ಈ ಪ್ರಕಟಣೆಯಲ್ಲಿ ಹೇಳಲಾಗಿದೆ.
ಇದರ ಬೆನ್ನಿಗೇ, ಹತ್ಯೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಈ ಘಟನೆಯಲ್ಲಿ ಭಾಗಿಯಾಗಿದ್ದ ಐವರು ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸಲಾಗಿದೆ ಎಂದೂ ಈ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಘಟನೆಯ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗೆ ನಿವಾಸಿಯಾದ ಮೃತ ಭದ್ರತಾ ಸಿಬ್ಬಂದಿ ಅಜಿತ್ ಕುಮಾರ್ ರನ್ನು ಪೊಲೀಸರು ತಮ್ಮೊಂದಿಗೆ ಕರೆದೊಯ್ದಿದ್ದರು. ನಂತರ, ಅಜಿತ್ ಕುಮಾರ್ ಲಾಕಪ್ ನಲ್ಲೇ ಮೃತಪಟ್ಟಿದ್ದರು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿ, ವಿರೋಧ ಪಕ್ಷಗಳು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು.