×
Ad

ತಿರುಪತಿ ಲಡ್ಡು ವಿವಾದ | SIT ತನಿಖೆ ತಾತ್ಕಾಲಿಕ ಸ್ಥಗಿತ

Update: 2024-10-01 20:31 IST

ಸಾಂದರ್ಭಿಕ ಚಿತ್ರ | PC : PTI 

ಅಮರಾವತಿ : ವೈ.ಎಸ್. ಜಗನ್ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ಕಲಬೆರಕೆ ತುಪ್ಪದಿಂದ ತಯಾರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯು ಈಗ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವುದರಿಂದ ಆ ಕುರಿತ ವಿಶೇಷ ತನಿಖಾ ತಂಡ (SIT)ದ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ರು ಮಂಗಳವಾರ ತಿಳಿಸಿದ್ದಾರೆ.

‘‘ಮೊದಲು, ಅವರು (SIT) ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು, ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಈ ನಡುವೆ, ಸುಪ್ರೀಂ ಕೋರ್ಟ್‌ನಿಂದ ಆದೇಶವೊಂದು ಬಂದಿದೆ. ಅದಕ್ಕೆ ಅನುಸಾರವಾಗಿ ನಾವು ತನಿಖೆಯನ್ನು ನಿಲ್ಲಿದ್ದೇವೆ’’ ಎಂದು ಡಿಜಿಪಿ ದ್ವಾರಕ ತಿರುಮಲ ರಾವ್ ಹೇಳಿಕೆಯೊಂದರಲ್ಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರ, SIT ಅಧಿಕಾರಿಗಳು ತಿರುಮಲದಲ್ಲಿರುವ ಹಿಟ್ಟಿನ ಗಿರಣಿಯ ಪರಿಶೀಲನೆ ನಡೆಸಿದ್ದರು. ಲಡ್ಡುಗಳನ್ನು ತಯಾರಿಸುವ ಮೊದಲು ಅಲ್ಲಿ ತುಪ್ಪವನ್ನು ಶೇಖರಿಸಿ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳ ಬಗ್ಗೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸೋಮವಾರ ವಿಚಾರಣೆಗೆ ಎತ್ತಿಕೊಂಡ ಸುಪ್ರೀಂ ಕೋರ್ಟ್, ದೇವರನ್ನು ರಾಜಕೀಯದಿಂದ ದೂರವಿಡಬೇಕು ಎಂದು ಹೇಳಿತ್ತು. ಜಗನ್ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರಕಾರದ ಅವಧಿಯಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿತ್ತು ಎಂಬುದಾಗಿ ಆರೋಪ ಮಾಡಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ತರಾಟೆಗೆ ತೆಗೆದುಕೊಂಡಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News