Uttar Pradesh ಉನ್ನಾವ್ ಅತ್ಯಾಚಾರ ಪ್ರಕರಣ | ಬಿಜೆಪಿ ನಾಯಕ ಕುಲದೀಪ್ ಸೆಂಗಾರ್ ನ ಜೀವಾವಧಿ ಶಿಕ್ಷೆ ಅಮಾನತು!
ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್
ಕುಲದೀಪ್ ಸಿಂಗ್ | Photo Credit : The Hindu
ಹೊಸದಿಲ್ಲಿ, ಡಿ. 23:ಉತ್ತರ ಪ್ರದೇಶದ ಉನ್ನಾವ್ ನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ಪೀಠ, 15 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಮೂರು ಶ್ಯೂರಿಟಿಗಳನ್ನು ಸಲ್ಲಿಸುವ ಷರತ್ತಿನೊಂದಿಗೆ ಸೆಂಗಾರ್ ನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.
ಸಂತ್ರಸ್ತೆಯ ಮನೆಯ ಐದು ಕಿಲೋಮೀಟರ್ ವ್ಯಾಪ್ತಿಯೊಳಗೆ ಪ್ರವೇಶಿಸಬಾರದು ಹಾಗೂ ಸಂತ್ರಸ್ತೆ ಅಥವಾ ಆಕೆಯ ತಾಯಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಂಪರ್ಕ ಸಾಧಿಸಬಾರದು ಎಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಜಾಮೀನು ರದ್ದುಪಡಿಸಲಾಗುವುದು ಎಂದು ಪೀಠ ಎಚ್ಚರಿಸಿದೆ.
2017ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಸೆಂಗಾರ್ ನನ್ನು ದೋಷಿ ಎಂದು ತೀರ್ಪು ನೀಡಲಾಗಿತ್ತು. ಈ ಸಂಬಂಧ 2019ರಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಆತ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದನು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ, 2019ರ ಆಗಸ್ಟ್ ನಲ್ಲಿ ಈ ಪ್ರಕರಣ ಹಾಗೂ ಸಂಬಂಧಿತ ಇತರೆ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದಿಲ್ಲಿಗೆ ವರ್ಗಾಯಿಸಲಾಗಿತ್ತು. ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗಾರ್ ಗೆ ವಿಧಿಸಲಾದ 10 ವರ್ಷಗಳ ಜೈಲು ಶಿಕ್ಷೆಗೆ ಸಂಬಂಧಿಸಿದ ಮೇಲ್ಮನವಿಯೂ ಇನ್ನೂ ವಿಚಾರಣೆಯಲ್ಲಿದೆ.