ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಅಜ್ಜ, ಅಪ್ಪ, ಚಿಕ್ಕಪ್ಪನ ಬಂಧನ
ಸಾಂದರ್ಭಿಕ ಚಿತ್ರ | PC : PTI
ಲಕ್ನೊ : ಅಪ್ರಾಪ್ತ ಬಾಲಕಿಯನ್ನು ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ ಹಾಗೂ ಗರ್ಭಿಣಿಯಾಗಲು ಕಾರಣವಾದ ಆರೋಪದಲ್ಲಿ ಬಾಲಕಿಯ ಅಜ್ಜ, ತಂದೆ ಹಾಗೂ ಚಿಕ್ಕಪ್ಪನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಾಲಕಿ ಸಂಬಂಧಿ ಮಹಿಳೆಯೊಂದಿಗೆ ಆಗಮಿಸಿ ಸ್ಥಳೀಯ ಬಿಧುನಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಹಾಗೂ ತನಿಖೆ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಲೋಕ್ ಮಿಶ್ರಾ ತಿಳಿಸಿದ್ದಾರೆ.
‘‘ತನ್ನ ಅಜ್ಜ, ತಂದೆ ಹಾಗೂ ಚಿಕ್ಕಪ್ಪ ಹಲವು ತಿಂಗಳುಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮೇಲ್ನೋಟಕ್ಕೆ ಬಾಲಕಿ ಎರಡು ತಿಂಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿದೆ’’ ಎಂದು ಮಿಶ್ರಾ ತಿಳಿಸಿದ್ದಾರೆ.
‘‘ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ’’ ಎಂದು ಅವರು ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಎಫ್), 65 (1) ಹಾಗೂ 232 ಹಾಗೂ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೋಕ್ಸೊ ಅಡಿಯಲ್ಲಿ ಕೂಡ ಪ್ರಕರಣ ದಾಖಲಿಸಲಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಹಾಗೂ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.