ವಯನಾಡ್ | ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವು ; ಪ್ರಧಾನಿ ನರೇಂದ್ರ ಮೋದಿ ಭರವಸೆ
ನರೇಂದ್ರ ಮೋದಿ | PC : PTI
ಹೊಸದಿಲ್ಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಿಕ್ಕಟ್ಟನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಿ ಅವರು ‘ಎಕ್ಸ್’ನ ಪೋಸ್ಟ್ನಲ್ಲಿ ‘‘ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತ ನನಗೆ ತೀವ್ರ ದುಃಖ ಉಂಟು ಮಾಡಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಹಾಗೂ ಗಾಯಗೊಂಡವರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಎಲ್ಲಾ ಸಂತ್ರಸ್ತರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’’ ‘‘ನಾನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅಲ್ಲದೆ, ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದ್ದೇನೆ’’ ಎಂದಿದ್ದಾರೆ.
ಪ್ರಧಾನಿ ಅವರು ಕೇರಳದ ಇಬ್ಬರು ಕೇಂದ್ರ ಸಚಿವರಾದ ಸುರೇಶ್ ಗೋಪಿ ಹಾಗೂ ಜಾರ್ಜ್ ಕುರಿಯನ್ ಅವರೊಂದಿಗೆ ಈ ಕುರಿತಂತೆ ಮಾತುಕತೆ ಕೂಡ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.