ವಯನಾಡ್ ಭೂಕುಸಿತ | ಮೃತಪಟ್ಟವರ ಸಂಖ್ಯೆ 224 ಕ್ಕೆ ಏರಿಕೆ
PC : PTI
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಲಾವನ್ನು ಧ್ವಂಸಗೊಳಿಸಿದ ಭೂಕುಸಿತಗಳಲ್ಲಿ ಕನಿಷ್ಠ 224 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜುಲೈ 30 ರಂದು ವಯನಾಡ್ ನಲ್ಲಿ ಸಂಭವಿಸಿದ ಭಾರೀ ಭೂಕುಸಿತದ ಬಳಿಕ ಮಂಗಳವಾರ 20 ಗಂಟೆಗಳ ಕಾಲ ತಡರಾತ್ರಿಯವರೆಗೂ ನಡೆದ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮುಂಡಕ್ಕೈನಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದೆ. ಈ ಘಟನೆಯಲ್ಲಿ ಸುಮಾರು 225 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ 89 ಮೃತದೇಹಗಳನ್ನು ಗುರುತಿಸಲಾಗಿದೆ. 143 ಮೃತ ದೇಹಗಳ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಕೂಡ ಪೂರ್ಣಗೊಂಡಿವೆ. ಈ ಪೈಕಿ 32 ಮೃತದೇಹಗಳನ್ನು ಮಂಗಳವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಮೆಪ್ಪಾಡಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸೌಜನ್ಯ : onmanorama.com