×
Ad

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಯಾರು?; ಇಲ್ಲಿದೆ ಮಾಹಿತಿ...

Update: 2025-08-18 12:29 IST

 ಸಿಪಿ ರಾಧಾಕೃಷ್ಣನ್ (Photo credit: PTI) 

ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆ ಬಳಿಕ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಸಿಪಿ ರಾಧಾಕೃಷ್ಣನ್ ಯಾರು?

1957ರಲ್ಲಿ ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಜನಿಸಿದ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದೊಂದಿಗೆ ತೊಡಗಿಸಿಕೊಂಡಿದ್ದರು.

ರಾಧಾಕೃಷ್ಣನ್ ಅವರು ತಮಿಳುನಾಡಿನ ಪ್ರಮುಖ ಗೌಂಡರ್ ಸಮುದಾಯಕ್ಕೆ ಸೇರಿದವರಾಗಿದ್ದು, ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

ರಾಧಾಕೃಷ್ಣನ್ ಅವರು 2024ರ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಈ ಹಿಂದೆ 2023ರ ಫೆಬ್ರವರಿಯಿಂದ 2024ರ ಜುಲೈವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ತೆಲಂಗಾಣದ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಹೊಣೆ ವಹಿಸಿಕೊಂಡಿದ್ದರು.

1998ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1999ರಲ್ಲಿ ಅದೇ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. 2004ರಿಂದ 2007ರವರೆಗೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ರಾಧಾಕೃಷ್ಣನ್ ಅವರು 2020ರಿಂದ 2022ರವರೆಗೆ ಬಿಜೆಪಿ ಕೇರಳ ಘಟಕದ ಉಸ್ತುವಾರಿಯಾಗಿದ್ದರು.

"ವ್ಯವಹಾರ ಆಡಳಿತ"(Business Administration) ವಿಭಾಗದಲ್ಲಿ ಪದವೀಧರರಾಗಿರುವ ರಾಧಾಕೃಷ್ಣನ್ ಅವರು ಅವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಮಟ್ಟದ ಚಾಂಪಿಯನ್ ಆಗಿದ್ದರು. ಕ್ರಿಕೆಟ್ ಮತ್ತು ವಾಲಿಬಾಲ್‌ನಲ್ಲೂ ವಿಶೇಷ ಆಸಕ್ತಿಯನ್ನು ಹೊಂದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News