“ನಾನು ಯಾಕೆ ಕ್ಷಮೆಯಾಚಿಸಬೇಕು?”: ಆಪರೇಷನ್ ಸಿಂಧೂರ್ ಕುರಿತ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಪ್ರಶ್ನೆ
ಪೃಥ್ವಿರಾಜ್ ಚವಾಣ್ (File Photo: PTI)
ಹೊಸದಿಲ್ಲಿ: ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಬುಧವಾರ ನಿರಾಕರಿಸಿದ್ದಾರೆ. “ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನಾನು ಯಾಕೆ ಕ್ಷಮೆಯಾಚಿಸಬೇಕು? ಸಂವಿಧಾನ ನನಗೆ ಪ್ರಶ್ನೆಗಳನ್ನು ಕೇಳುವ ಹಕ್ಕನ್ನು ನೀಡಿದೆ” ಎಂದು ಹೇಳಿದ್ದಾರೆ.
ಮಂಗಳವಾರ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್, “ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಿಕೊಂಡರೂ ಇಲ್ಲದಿದ್ದರೂ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಯಿತು. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹೊರಟಿದ್ದರೆ ಪಾಕಿಸ್ತಾನ ಅದನ್ನು ಹೊಡೆದುರುಳಿಸುವ ಸಾಧ್ಯತೆ ಇತ್ತು" ಎಂದು ಹೇಳಿದ್ದರು.
ಪೃಥ್ವಿರಾಜ್ ಚವಾಣ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ, ಕಾಂಗ್ರೆಸ್ ಪಕ್ಷ ಭಾರತೀಯ ಸಶಸ್ತ್ರ ಪಡೆಗಳನ್ನು ಪದೇ ಪದೇ ಅಗೌರವಿಸುತ್ತಿದೆ ಎಂದು ಆರೋಪಿಸಿದ್ದರು.