×
Ad

ಆರೋಗ್ಯದ ಬಗ್ಗೆ ಕಾಳಜಿ ವಹಿಸಿ- ಸೊರಕೆ

Update: 2016-01-04 15:16 IST

ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಸೋಮವಾರ ಕುಕ್ಕಿಕಟ್ಟೆಯ ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಇಂದ್ರಧನುಷ್ 4 ನೇ ಹಂತದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  
   ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ರೋಗಗಳಿಗೆ ಆಹ್ವಾನ ನೀಡಿದಂತೆ ಆದ್ದರಿಂದ ಆರೋಗ್ಯ ಇಲಾಖೆ ಸೂಚಿಸುವ ಎಲ್ಲಾ ಲಸಿಕೆಗಳನ್ನು ನಿಗದಿತ ಅವಧಿಯಲ್ಲಿ ಮಕ್ಕಳಿಗೆ ತಪ್ಪದೇ ನೀಡುವಂತೆ ತಿಳಿಸಿದ ಸಚಿವರು, ಇಂದ್ರ ಧನುಷ್ ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ರೋಟರಿ ಸಂಸ್ಥೆಯ ಪ್ರತಿನಿಧಿಗಳನ್ನು ಅಭಿನಂದಿಸಿದರು.  ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇಂದ್ರ ಧನುಷ್ ಕಾರ್ಯಕ್ರಮದ ಕುರಿತು ಹೆಚ್ಚಿನ ಪ್ರಚಾರ ನೀಡಿ, ಇದರ ಪ್ರಯೋಜನವನ್ನು ಎಲ್ಲರಿಗೂ ತಲುಪಿಸಬೇಕು ಎಂದು ಸಚಿವರು ಹೇಳಿದರು.
   
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಪ್ರಾಸ್ತವಿಕವಾಗಿ ಮಾತನಾಡಿ, 4 ನೇ ಹಂತದ ಇಂದ್ರಧನುಷ್ ಕಾರ್ಯಕ್ರಮದಲ್ಲಿ 468 ಗರ್ಭಿಣಿಯರು, 2464 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, 295 ಲಸಿಕಾ ಕೇಂದ್ರಗಳು ಮತ್ತು 35 ಮೊಬೈಲ್ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.  ರೋಟರಿ ವಲಯ ಲಸಿಕಾ ವಿಭಾಗದ ಛೆರ್ಮನ್ ಡಾ. ಪ್ರಶಾಂತ್ ಮಾತನಾಡಿ, ಇಂದ್ರ ಧನುಷ್ ಕಾರ್ಯಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್‌ನ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುತ್ತಿರುವ ಕಿರಿಯ ಆರೋಗ್ಯ ಸಹಾಯಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಅಭಿನಂದಿಸಿದರು.
   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲಿಸ್, ನಗರ ಕುಟುಂಬ ಕಲ್ಯಾಣ ಕೇಂದ್ರದ ನಿರ್ದೇಶಕಿ ಹರಿಣಿ ದಾಮೋದರ್ , ರೋಟರಿ, ಲಯನ್ಸ್, ರೆಡ್‌ಕ್ರಾಸ್ ನ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News