ಜ.12ರಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ
ಬೆಂಗಳೂರು, ಜ.7: ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗಾಗಿ ಜ.12ರಂದು ಪದವಿ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯದ ಎಲ್ಲ ತಾಲೂಕು-ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದೆಂದು ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸಾಚಾರ್ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಇಲ್ಲಿಯವರೆಗೂ ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬರಲಾಗಿದೆ. ಹೀಗಾಗಿ ಜ.12ರಂದು ಪದವಿ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವವರೆಗೆ ಉಪನ್ಯಾಸಕರ ವೇತನವನ್ನು 25 ಸಾವಿರ ರೂ.ಹೆಚ್ಚಿಸಿ, ವರ್ಷದ 12 ತಿಂಗಳೂ ನೀಡಬೇಕು. ಸೇವೆಯ ಹಿರಿ ತನದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.