ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ನಿರ್ಧಾರ: ಸಿ.ಟಿ.ರವಿ
ಬೆಂಗಳೂರು, ಜ. 10: ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಸಾಮೂಹಿಕ ನಾಯಕತ್ವದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯತಂತ್ರ ರೂಪಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಿಂದ ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಅದೇ ಅಂಶ ಪುನರಾವರ್ತನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎಂದರು.
ಸಂಸದರು, ಉಭಯ ಸದನಗಳ ನಾಯಕರು, ಪಕ್ಷದ ಶಾಸಕರು, ಮಾಜಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರನ್ನು ಚುನಾವಣೆಯಲ್ಲಿ ತೊಡಗಿಸಿಕೊಳ್ಳಬೇಕು. ಅಲ್ಲದೆ, ಎಲ್ಲ ನಾಯಕರಿಗೂ ಚುನಾವಣಾ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಕಾರ್ಯತಂತ್ರವನ್ನು ರೂಪಿಸಲಾಗುವುದು ಎಂದು ಹೇಳಿದರು.
ಪೂರ್ವ ಸಿದ್ಧತೆ: ಇದೇ ತಿಂಗಳ 11ರಿಂದ 14ರ ವರೆಗೆ ಪಕ್ಷದ 9 ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದು, ಚುನಾವಣಾ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆ ನಡೆಸಲಿದೆ ಎಂದ ಅವರು, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರಕಾರ ಹಾಗೂ ಹಿಂದಿನ ಬಿಜೆಪಿ ಸರಕಾರ ರೂಪಿಸಿದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದ ಅವರು, ಸಾಮೂಹಿಕ ನಾಯಕತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಎದುರಿಸಲಾಗುವುದು ಎಂದರು.
ಜಿಲ್ಲಾ ಮಟ್ಟದ ಚುನಾವಣಾ ಸಮಿತಿಗಳ ಅನುಮೋದನೆ ಪಡೆದ ಬಳಿಕ ತಾಲೂಕು ಪಂಚಾಯತ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅದೇ ಮಾದರಿಯಲ್ಲೆ ಜಿಲ್ಲಾ ಪಂಚಾಯತ್ ಅಭ್ಯರ್ಥಿಗಳನ್ನು ರಾಜ್ಯ ಚುನಾವಣಾ ಸಮಿತಿ ಅಂತಿಮಗೊಳಿಸಲಿದೆ ಎಂದು ರವಿ ತಿಳಿಸಿದರು.
ಮೇಲ್ಮನೆ ಚುನಾವಣೆಯಲ್ಲಿ ಪಕ್ಷಕ್ಕೆ ಕೊಂಚ ಹಿನ್ನಡೆಯಾಗಿದ್ದು, ಜಿಲ್ಲೆಗಳಿಂದ ವರದಿ ಕೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಹೆಚ್ಚಿನ ಮತ ದೊರೆತು, ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುತ್ತದೆಂಬ ನಿರೀಕ್ಷೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸೋಲಾಗಿದೆ ಎಂದು ವಿಶ್ಲೇಷಿಸಿದರು.