ಪರಿಶಿಷ್ಟರ ಅನುದಾನ ಸದ್ಬಳಕೆಯಾಗದಿದ್ದರೆ ಕಠಿಣ ಕ್ರಮ: ಮುಖ್ಯಮಂತ್ರಿ
ಬೆಂಗಳೂರು, ಜ.13: ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗೆ ನಿಗದಿಪಡಿಸಿರುವ ಅನುದಾನ ಮಾರ್ಚ್ ಅಂತ್ಯದ ವೇಳೆಗೆ ಸದ್ಬಳಕೆ ಆಗಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಎಸ್ಸಿ-ಎಸ್ಟಿ ಮತ್ತು ಟಿಎಸ್ಟಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಧಿ ಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆಯನ್ನು ನೀಡಿದರು.
ಎಸ್ಸಿ-ಎಸ್ಟಿ ಮತ್ತು ಟಿಎಸ್ಟಿ ಕಾರ್ಯಕ್ರಮಗಳ ಜಾರಿಯಲ್ಲಿ ಯಾವುದೇ ಅಧಿಕಾರಿ ನಿರ್ಲಕ್ಷ ತೋರಿದರೆ ಅಥವಾ ಬೇಜವಾಬ್ದಾರಿಯಿಂದ ವರ್ತಿಸಿದರೆ ಸಹಿಸುವುದಿಲ್ಲ. ಅನುದಾನ ಸದ್ಬಳಕೆಗಾಗಿಯೇ ಸರಕಾರ ಕಾನೂನು ರೂಪಿಸಿದೆ. ಹಾಗೆಯೇ, ಅನುದಾನ ಬಳಕೆ ಮಾಡುವಲ್ಲಿ ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಎಸ್ಸಿ-ಎಸ್ಟಿ ಮತ್ತು ಟಿಎಸ್ಟಿ ಕಾರ್ಯಕ್ರಮ ಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ಪ್ರತಿ ತಿಂಗಳು ಪರಿಶೀಲನೆ ನಡೆಸಬೇಕು. ಕಾರ್ಯಕ್ರಮಗಳ ಜಾರಿಗೆ ಯಾವುದೇ ತೊಂದರೆಗಳು ಎದುರಾದಲ್ಲಿ ಅವುಗಳನ್ನು ನಿವಾರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ನೀರಾವರಿ, ಯುವಜನ ಸಬಲೀಕರಣ ಸೇರಿದಂತೆ ಇನ್ನಿತರ ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಸುವಲ್ಲಿ ಹಿಂದೆ ಬಿದ್ದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮಾರ್ಚ್ ಅಂತ್ಯದ ವೇಳೆಗೆ ಅನುದಾನವನ್ನು ಬಳಕೆ ಮಾಡಿರಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರಕಾರವು ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಈ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಇದು ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವುದರಿಂದ ಅಧಿಕಾರಿ ಗಳು ಇದರ ಬಗ್ಗೆ ವಿಶೇಷವಾದ ಗಮನ ಹರಿಸಬೇಕು. ಸಮಾಜ ಕಲ್ಯಾಣ ಸಚಿವರು ಪ್ರತಿ ತಿಂಗಳು ಈ ಸಂಬಂಧ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಮೀಕ್ಷೆ ಮಾಡಿ: ಈ ಯೋಜನೆಯಲ್ಲಿ ದಲಿತರ ಕಾಲನಿಯಲ್ಲಿ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ. ಅವುಗಳ ಕಾಮಗಾರಿಯ ಗುಣಮಟ್ಟ ಉತ್ತಮವಾಗಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇದುವರೆಗೆ ಆಗಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳ ಬಗ್ಗೆ ಸಮೀಕ್ಷೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಅರಣ್ಯವಾಸಿಗಳ ವಿಚಾರದಲ್ಲಿ ಸೂಚನೆ ಪಾಲಿಸಿ: ಪರಿಶಿಷ್ಟ ಜಾತಿ, ಪಂಗಡ ಗಳ(ದೌರ್ಜನ್ಯ ತಡೆ) ಕಾಯ್ದೆ ಸಂಬಂಧ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಮುಖ್ಯಮಂತ್ರಿ, ಅರಣ್ಯವಾಸಿಗಳ ವಿಚಾರದಲ್ಲಿ ಸರಕಾರ ನೀಡಿರುವ ಸೂಚನೆಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು ಎಂದು ಹೇಳಿದರು.
ಬುಡಕಟ್ಟು ಸಮುದಾಯದ ಅನೇಕ ಮಂದಿ ಅರಣ್ಯ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಅರಣ್ಯ ಇಲಾಖೆಯಿಂದ ಕೆಲವೆಡೆ ವಿಳಂಬವಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.
ಸ್ಮಶಾನಗಳ ಅಭಿವೃದ್ಧಿಗೆ ಸರಕಾರ ನೀಡಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಗಮನ ಹರಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದರು.
ಶಾಸಕರ ಮೆಚ್ಚುಗೆ: ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಗೋವಿಂದ ಕಾರಜೋಳ, ಪರಿಶಿಷ್ಟ ಜಾತಿ, ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆ ಸಂಬಂಧ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಕಳೆದ ಏಳು ವರ್ಷಗಳಿಂದ ನಡೆದಿರಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಎರಡನೆ ಬಾರಿಗೆ ಸಭೆ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ್, ಟಿ.ಬಿ.ಜಯಚಂದ್ರ, ಎಚ್.ಕೆ. ಪಾಟೀಲ್, ಡಾ.ಎಚ್.ಸಿ. ಮಹದೇವಪ್ಪ, ಎಚ್.ಆಂಜನೇಯ, ಶಿವರಾಜ ತಂಗಡಗಿ, ಪಿ.ಟಿ.ಪರಮೇಶ್ವರ್ ನಾಯಕ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್, ಸಂಸದ ಧ್ರುವನಾರಾಯಣ, ಶಾಸಕರಾದ ರಾಜು ಅಲಗೂರು, ಶಿವಮೂರ್ತಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.