ಪಕ್ಷದ ಜವಾಬ್ದಾರಿಯೊಂದಿಗೆ ಜಿಲ್ಲಾ ಉಸ್ತುವಾರಿ ಕಷ್ಟ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಜ.13: ಜಿಲ್ಲಾ ಹಾಗೂ ತಾಲೂಕು ಪಂಚಾ ಯತ್ ಚುನಾವಣೆಗಳು ಎದು ರಿರುವ ಸಂದರ್ಭದಲ್ಲಿ ಪಕ್ಷದ ಜವಾಬ್ದಾರಿ ಹೆಚ್ಚಿದೆ. ಈ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ನಿಭಾಯಿಸುವುದು ಕಷ್ಟಕರವಾಗ ಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿನ ಸಭಾಪತಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ನೂತನ ಸದಸ್ಯ ರಘು ಆಚಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷನಾಗಿ ನನಗೆ ಹೆಚ್ಚಿನ ಜವಾಬ್ದಾರಿಯಿದೆ. ಪಕ್ಷ ಕೊಟ್ಟಿರುವ ಯಾವುದೇ ಕೆಲಸ ಮತ್ತು ಜವಾಬ್ದಾರಿಯನ್ನು ನಿರಾಕರಿಸದೆ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಚಿಕ್ಕ ಮಗಳೂರು ಜಿಲ್ಲಾ ಉಸ್ತುವಾರಿಯನ್ನು ನನಗೆ ನೀಡಿರುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದರು.
ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಯನ್ನು ಘೋಷಿಸಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧವಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಂತರಿಕ ಸಮಿತಿಗಳನ್ನು ರಚನೆ ಮಾಡಿದ್ದೇವೆ. ಸಮಿತಿಯ ಸದಸ್ಯರು ಆಯಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚಿಸಿ ಸಂಭವನೀಯ ಅಭ್ಯರ್ಥಿಗಳಿಗೆ ಸಂಬಂಧಿಸಿದ ವರದಿಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿ, ಹೈಕಮಾಂಡ್ ಒಪ್ಪಿಗೆ ಪಡೆದು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.
ವಿಧಾನಪರಿಷತ್ತಿನ ಹಾಲಿ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ವಿಧಾಪರಿಷತ್ ಸದಸ್ಯರು ಹಾಗೂ ಹಿಂದಿನ ಚುನಾವಣಾ ಅಭ್ಯರ್ಥಿಗಳನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂದು ಪಕ್ಷದಲ್ಲಿ ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದರು.
ಜನಮನ್ನಣೆ ಹೊಂದಿರುವ ಮತ್ತು ಗೆಲ್ಲುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು ಪರಮೇಶ್ವರ್ ಹೇಳಿದರು.