ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಟಿಕೆಟ್: ಡಾ.ಜಿ.ಪರಮೇಶ್ವರ್
ಬೆಂಗಳೂರು, ಜ.18: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್‌ಗೆ ಕಾಂಗ್ರೆಸ್ ಟಿಕೆಟ್ ನೀಡದಂತೆ ಪಕ್ಷದ ಪದಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದವರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದರು.
ಕಾರ್ಯಕರ್ತರು ಹಾಗೂ ನಾಯಕರ ಜೊತೆ ಚರ್ಚೆ ನಡೆಸಿ ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಚಿಕ್ಕಮಗಳೂರು ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನಾಯಕರು ಕೆಲಸ ಮಾಡಿದ್ದಾರೆ ಅನ್ನೋದು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳನ್ನು ರಚಿಸಲಾಗಿದೆ. ಜ.25ರೊಳಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿಗೆ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮಹಿಳೆಯರು, ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡುವುದಿಲ್ಲ. ಆದಷ್ಟು ಶೀಘ್ರದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.
ವೀಕ್ಷಕರ ಸಭೆ: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿ ಸಿದಂತೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನಿವಾಸದಲ್ಲಿ ಚುನಾವಣಾ ವೀಕ್ಷಕರಾದ ಡಾ.ಬಿ.ಎಲ್.ಶಂಕರ್, ಮುದ್ದುಹನುಮೇಗೌಡ, ಐವನ್ ಡಿಸೋಜಾ, ಎನ್.ಎಸ್.ಬೋಸರಾಜು, ಲಕ್ಷ್ಮೀನಾರಾಯಣ್, ಲೋಹಿತ್ ಡಿ.ನಾಯ್ಕರ್ ಸಭೆ ನಡೆಸಿದ್ದಾರೆ.
ಭೆರತಿ ವಿರುದ್ಧ ರೇವಣ್ಣ ಆಕ್ರೋಶ?
ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ಈಗಾಗಲೇ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಪಕ್ಷದ ಸದಸ್ಯತ್ವವನ್ನು ಪಡೆಯದೆ ಇರುವ ಯಾವ ವ್ಯಕ್ತಿಗೂ ವಿಧಾನಸಭಾ ಉಪ ಚುನಾವಣೆ ಅಥವಾ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂಬ ನಿರ್ಣಯವನ್ನು ರೇವಣ್ಣ ಸಭೆಯಲ್ಲಿ ಮಂಡಿಸಿದ್ದಾರೆ ಎಂದು ತಿಳಿದು ಬಂದಿದೆ.