ಭೈರತಿ ಸುರೇಶ್ ಕಾಂಗ್ರೆಸ್ ಸಹ ಸದಸ್ಯ: ಸಿಎಂ
ಬೆಂಗಳೂರು, ಜ.20: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯರಲ್ಲದಿದ್ದರೂ ಶಾಸಕಾಂಗ ಪಕ್ಷದ ಸಹ ಸದಸ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಪ್ರಸ್ತುತ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗುವುದು ಸಾಧ್ಯವಿಲ್ಲ. ಪಕ್ಷೇತರರಾಗಿ ಅವರು ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಅವರೇನಾದರೂ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡರೆ, ವಿಧಾನಪರಿಷತ್ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಣೆ ನೀಡಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನಾನು ಭೈರತಿ ಸುರೇಶ್‌ರನ್ನು ಶಾಸಕಾಂಗ ಪಕ್ಷದ ಸಹ ಸದಸ್ಯನನ್ನಾಗಿ ಮಾಡಿಕೊಂಡಿದ್ದೇನೆ. ಈ ಹಿಂದೆ ಚಿತ್ರದುರ್ಗ ಕ್ಷೇತ್ರದಿಂದ ಪಕ್ಷೇತರ ಸದಸ್ಯರಾಗಿ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ರಘು ಆಚಾರ್‌ನ್ನು ಸಹ ಸದಸ್ಯನನ್ನಾಗಿ ಮಾಡಿಕೊಳ್ಳಲಾಗಿತ್ತು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ನೀಡಿ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ವೀಕ್ಷಕರು ಸಮಾಲೋಚನೆ ನಡೆಸುತ್ತಿದ್ದು, ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಈ ಕ್ಷೇತ್ರದಿಂದ ಕಣಕ್ಕಿಳಿಯಲು ವಿಧಾನಪರಿಷತ್ ಸದಸ್ಯರಾದ ಭೈರತಿ ಸುರೇಶ್, ಎಚ್.ಎಂ.ರೇವಣ್ಣ, ಆರ್. ವಿ. ವೆಂಕಟೇಶ್, ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿ ರೆಹ್ಮಾನ್ ಶರೀಫ್, ರವಿಶಂಕರ್ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ಅವರು ತಿಳಿಸಿದರು.