ಫೆ.3ರಿಂದ ಬಂಡವಾಳ ಹೂಡಿಕೆದಾರರ ಸಮಾವೇಶ; ನಗರದಾದ್ಯಂತ ಫ್ಲೆಕ್ಸ್, ಬ್ಯಾನರ್ ನಿಷೇಧ: ದೇಶಪಾಂಡೆ
ಬೆಂಗಳೂರು, ಜ.20: ನಗರದ ಅರಮನೆ ಮೈದಾನದಲ್ಲಿ ಫೆ.3 ರಿಂದ 5ರವರೆಗೆ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ ಯಾವುದೇ ಫ್ಲೆಕ್ಸ್‌ಗಳು ಇರದಂತೆ ನೋಡಿಕೊಳ್ಳಬೇಕೆಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೂಚಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಬಂಡವಾಳ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲನೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ ಯಾವುದೇ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್‌ಗಳು ಇರಬಾರದು. ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ಫ್ಲೆಕ್ಸ್, ಬ್ಯಾನರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕೆಂದು ಬಿಬಿಎಂಪಿ ಕಮಿಷನರ್ ಕುಮಾರ್ ನಾಯಕ್‌ರಿಗೆ ಸೂಚಿಸಿದ್ದಾರೆ.
ಬಂಡವಾಳ ಹೂಡಿಕೆದಾರರ ಸಮಾವೇಶದ ಹಿನ್ನೆಲೆ ಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ದೇಶಪಾಂಡೆ, ವಸಂತ ನಗರ, ಜಯಮಹಲ್ ರಸ್ತೆ, ಹೆಬ್ಬಾಳ ಫ್ಲೈಓವರ್ ಮುಂತಾದ ಕಡೆ ಪರಿಶೀಲನೆ ನಡೆಸಿದ್ದು, ಈ ರಸ್ತೆಗಳಿಗೆ ಡಾಂಬರೀಕರಣ ನಡೆಯುತ್ತಿರುವುದನ್ನು ಗಮನಿಸಿದರು. ಇವರೊಂದಿಗೆ ಕೃಷಿ ಸಚಿವ ಕೃಷ್ಣಭೈರೇಗೌಡ, ಎಸ್.ಆರ್. ಪಾಟೀಲ್, ಮೇಯರ್ ಮಂಜುನಾಥ ರೆಡ್ಡಿ, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಬಿಬಿಎಂಪಿ ಅಧಿಕಾರಿಗಳು ಜೊತೆಯಲ್ಲಿದ್ದರು.