ಮೇ ತಿಂಗಳಲ್ಲಿ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ: ಸಚಿವ ಶಿವಕುಮಾರ್
ಬೆಂಗಳೂರು, ಜ. 20: ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಮುಂಬರಲಿರುವ ಮೇ ತಿಂಗಳ ವರೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಭರವಸೆ ನೀಡಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ 8,800 ಮೆ.ವ್ಯಾ. ವಿದ್ಯುತ್ ಬೇಡಿಕೆಯಿದ್ದು, ಅಷ್ಟೇ ಪ್ರಮಾಣದ ವಿದ್ಯುತ್ ವಿವಿಧ ಮೂಲಗಳಗಳಿಂದ ಲಭ್ಯವಿದೆ. ಆ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆ ಇದೀಗ ಉದ್ಭವಿಸುವುದಿಲ್ಲ ಎಂದರು.
ಮುಂದಿನ ತಿಂಗಳಲ್ಲಿ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕದ ಮೂರನೆ ಸ್ಥಾವರ ದಿಂದ 700 ಮೆ.ವ್ಯಾ.ನಷ್ಟು ವಿದ್ಯುತ್ ದೊರೆಯಲಿದ್ದು, ಪರಿಸ್ಥಿತಿ ಸುಧಾರಿಸಲಿದೆ ಎಂದ ಅವರು, ರೈತರಿಗೆ ಪ್ರತಿ ನಿತ್ಯ ಕನಿಷ್ಠ 6ರಿಂದ 8 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.
ಎಲ್‌ಇಡಿ ಕಡ್ಡಾಯ: ರಾಜ್ಯದಲ್ಲಿನ ಎಲ್ಲ ಸರಕಾರಿ ಕಚೇರಿಗಳಲ್ಲಿಯೂ ಎಲ್‌ಇಡಿ ಬಲ್ಬ್ ಅಳವಡಿಕೆ ಕಡ್ಡಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು, ವಿದ್ಯುತ್ ಉಳಿತಾಯ ವರ್ಷಾಚರಣೆ ಹಿನ್ನೆಲೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಮನೆಯ ಮೇಲ್ಛಾವಣಿ ಮೇಲೆ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಅಳವಡಿಸಲು ಸರಳ ರೂಪದಲ್ಲಿ ಸಾಲಸೌಲಭ್ಯ ದೊರೆಯುತ್ತಿದೆ. ಆ ಹಿನ್ನೆಲೆಯಲ್ಲಿ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲೇ ಕನಿಷ್ಠ 25 ಮಂದಿ ಗ್ರಾಹಕರನ್ನು ಗುರುತಿಸಲು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗ್ರಾಹಕರ ಸಭೆ: ನಗರ ಪ್ರದೇಶದಲ್ಲಿ ಗ್ರಾಹಕರ ಕುಂದು-ಕೊರತೆಗಳನ್ನು ಆಲಿಸಲು ಶೀಘ್ರದಲ್ಲೇ ವಿಭಾಗೀಯ ಮಟ್ಟದಲ್ಲಿ ಸಭೆ ನಡೆಸಲಾಗುವುದು ಎಂದ ಅವರು, ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಷ್ಕೃತ ಯೋಜನೆ: ಶಿವಸಮುದ್ರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಯೋಜನೆ 1ಸಾವಿರ ಕೋಟಿ ರೂ.ಗಳಿಗೆ ಮೀರದಂತೆ ಪರಿಷ್ಕೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಶಿವಕುಮಾರ್ ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.