ಬಿಜೆಪಿ ಪಾಲಿಗೆ ಕಂಟಕವಾಗಿರುವ ‘ಹೆಬ್ಬಾಳ’
ಬೆಂಗಳೂರು, ಜ.21: ಪ್ರತಿಪಕ್ಷ ಬಿಜೆಪಿಗೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಂಟಕವಾಗಿದೆ. ಬಿಜೆಪಿ ಶಾಸಕ ಜಗದೀಶ್‌ಕುಮಾರ್ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಪ್ರಬಲ ಲಾಬಿ ನಡೆಸುತ್ತಿದ್ದಾರೆ.
ಕಟ್ಟಾ ಸುಬ್ರಹ್ಮಣ್ಯನಾಯ್ಡು ತಮಗೆ ಟಿಕೆಟ್ ನೀಡಿ, ಚುನಾವಣೆಯ ವೆಚ್ಚವನ್ನು ಪಕ್ಷ ಭರಿಸಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಒಂದು ವೇಳೆ ಬೇರೆಯವರಿಗೆ ಟಿಕೆಟ್ ನೀಡಿದರೆ ಚುನಾವಣಾ ಪ್ರಕ್ರಿಯೆಯಲ್ಲಿ ತಟಸ್ಥವಾಗಿರುವುದಾಗಿ ಪಕ್ಷದ ಪ್ರಮುಖ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಭೂ ಅಕ್ರಮಗಳ ಆರೋಪಗಳಿಂದಾಗಿ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಆದರೆ, ಅವರು ತಮ್ಮ ಬೆಂಬಲಿಗ ಜಗದೀಶ್‌ಕುಮಾರ್‌ಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಸ್ವತಃ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಬಿಜೆಪಿಯಿಂದ ಟಿಕೆಟ್ ಪಡೆಯಲು ಪ್ರಯತ್ನ ಪಡುತ್ತಿದ್ದಾರೆ.
ಕೋಲಾರದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಮೂಲಕ ಟಿಕೆಟ್ ಗಿಟ್ಟಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಈ ಸಂಬಂಧ ಸದಾನಂದಗೌಡ, ಗುರುವಾರ ಚಾಮರಾಜ ಪೇಟೆಯಲ್ಲಿರುವ ಕೇಶವಕೃಪಾದಲ್ಲಿ ಆರೆಸ್ಸೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಕೆ: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಸ್ಪಷ್ಟವಾದ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.
ಗುರುವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಿಜೆಪಿ ಘಟಕದ ವತಿಯಿಂದ ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ಅಭ್ಯರ್ಥಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ಸಂಭಾವ್ಯ ಅಭ್ಯರ್ಥಿಗಳು: ವೈ.ಎ.ನಾರಾಯಣಸ್ವಾಮಿ(ಹೆಬ್ಬಾಳ), ಸೂರ್ಯಕಾಂತ ನಾಗಮಾರಪಲ್ಲಿ ಅಥವಾ ಪ್ರಕಾಶ್ ಖಂಡ್ರೆ(ಬೀದರ್), ಮಾಜಿ ಸಚಿವ ಶಿವನಗೌಡ ನಾಯಕ್(ದೇವದುರ್ಗ) ಹೆಸರನ್ನು ಬಿಜೆಪಿ ಕೇಂದ್ರೀಯ ಸಮಿತಿಗೆ ರಾಜ್ಯ ಘಟಕ ಶಿಫಾರಸು ಮಾಡಿದ್ದು, ಬಹುತೇಕ ಶುಕ್ರವಾರ ಸಂಜೆ ವೇಳೆಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.