ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಬದ್ಧ: ಸಚಿವ ಪರಮೇಶ್ವರ್ ನಾಯ್ಕ್
ಬೆಂಗಳೂರು, ಜ. 21: ಡಾ.ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ‘ಎ-ಬಿ’ ವರ್ಗ ಹುದ್ದೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿಲ್ಲ. ಆ ಹಿನ್ನೆಲೆಯಲ್ಲಿ ಈ ಸಂಬಂಧ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯ್ಕ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಆದರೆ, ಈವರೆಗೂ ಶೇ.20ರಷ್ಟು ಹುದ್ದೆಗಳನ್ನು ನೀಡಿಲ್ಲ. ಹೀಗಾಗಿ ಅಧಿಕಾರಿಗಳ ವರದಿ ಆಧರಿಸಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿನ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯಲ್ಲಿ ನೂರಕ್ಕೆ ನೂರರಷ್ಟು ಕನ್ನಡಿಗರಿಗೆ ಮತ್ತು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಾಗಿದೆ. ಆದರೆ, ಅದೇ ನೀತಿಯನ್ನು ಎ ಮತ್ತು ಬಿ ದರ್ಜೆ ಹುದ್ದೆಗಳಲ್ಲಿ ಪಾಲಿಸಿಲ್ಲ ಎಂಬುದು ಮೇಲುನೋಟಕ್ಕೆ ಕಂಡು ಬಂದಿದೆ ಎಂದು ಅವರು ತಿಳಿಸಿದರು.