×
Ad

ಮೆಟ್ರೋ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಲು ದಸಂಸ ಒತ್ತಾಯ: ‘ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ’

Update: 2016-01-25 23:54 IST

ಬೆಂಗಳೂರು, ಜ.25: ವಿಧಾನಸೌಧದ ಮುಂಭಾಗದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಸದಸ್ಯರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ದಲಿತ ಸಂಘರ್ಷ ಸಮಿತಿಯ ಸದಸ್ಯರು, ಲೋಕೋಪ ಯೋಗಿ ಹಾಗೂ ಮೆಟ್ರೋ ನಿಗಮದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಒತ್ತಾಯ ಕೇಳಿ ಬಂದಿದೆ.

ಮೆಟ್ರೊ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಮಾಡಿರುವ ಒತ್ತಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗುವುದು ಎಂದು ಸಭೆಯ ಬಳಿಕ ಸಚಿವ ಜಾರ್ಜ್ ಸುದ್ದಿಗಾರರಿಗೆ ತಿಳಿಸಿದರು.

ವಿಧಾನಸೌಧದ ಮುಂಭಾಗದ ರಸ್ತೆಯನ್ನು ಅಂಬೇಡ್ಕರ್ ವೀಧಿ ಎಂದು ನಾಮಕರಣ ಮಾಡಲಾಗಿದೆ. ಅಲ್ಲದೆ, ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆಯೂ ಇರುವುದರಿಂದ ಮೆಟ್ರೊ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡಬಹುದು. ಈ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದರು.

ಮೆಟ್ರೊ ನಿಲ್ದಾಣದ ನಾಮಕರಣ ಸಂಬಂಧ ರಾಜ್ಯ ಸರಕಾರ ಒಪ್ಪಿಗೆ ನೀಡಿದರೂ ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆಯ ಅನುಮತಿ ಪಡೆಯಬೇಕಾಗುತ್ತದೆ ಎಂದು ಅವರು ತಿಳಿಸಿದರು. ವಿಧಾನಸೌಧದ ಮುಂಭಾಗದಲ್ಲಿದ್ದ ಪ್ರತಿಮೆಗಳನ್ನು ಮೆಟ್ರೊ ಕಾಮಗಾರಿ ಮುಕ್ತಾಯಗೊಂಡ ನಂತರ ಅದೇ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಹಿಂದಿನ ರಾಜ್ಯ ಸರಕಾರ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿತ್ತು. ಅದರಂತೆ, ಪ್ರತಿಮೆಗಳನ್ನು ಹಿಂದಿನ ಸ್ಥಳದಲ್ಲೇ ಇರಿಸಲಾಗುವುದು ಎಂದು ಜಾರ್ಜ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News