ಕಾಪು ಜನಾಂಗಕ್ಕೆ ಮೀಸಲಾತಿ ಬೇಡಿಕೆ; ಸಹಜ ಸ್ಥಿತಿಗೆ

Update: 2016-02-01 17:58 GMT

ವಿಶಾಖಪಟ್ಟಣ, ಫೆ.1: ಕಾಪು ಜನಾಂಗವನ್ನು ಒಬಿಸಿ ಪಟ್ಟಿಗೆ ಸೇರಿಸದಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಶ್ಚಿಮ ಗೋದಾವರಿ ಜಿಲ್ಲೆಯ ತುನಿ ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಇಂದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.

 
ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದರೂ, ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನಾಕಾರರು ಮತ್ತೆ ಹಿಂಸಾಚಾರಕ್ಕೆ ಇಳಿಯುವುದನ್ನು ತಡೆಗಟ್ಟಲು ಪೊಲೀಸರು ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಆರ್ ಪಿ. ಠಾಕೂರ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದಾರೆ.
ಕಾಪು ಜನಾಂಗವನ್ನು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿ ಎ ಸೇರಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಭರವಸೆ ನೀಡಿದ ನಂತರ ಕಾಪು ನಾಯಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದರೂ,ಪರಿಸ್ಥಿತಿ ಸಹಜ ಸ್ಥಿತಿಗೆ ಇನ್ನೂ ಮರಳಿಲ್ಲ.
ಒಬಿಸಿ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿರುವುದಾಗಿ ಕಾಪು ಜನಾಂಗದ ನಾಯಕ ಎಂ.ಪದ್ಮನಾಭಂ ರವಿವಾರ ತಡರಾತ್ರಿ ಘೋಷಿಸಿದ್ದರು.
ಪರಿಸ್ಥಿತಿಯನ್ನು ನಿಯಂತ್ರಿಸಲು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ 3,500ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ರವಿವಾರ ನಡೆದಿರುವ ಗಲಭೆಯ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ರವಿವಾರ ಪ್ರತಿಭಟನಾಕಾರರು ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದರು. ಎರಡು ಪೊಲೀಸ್ ಮತ್ತು25 ವಾಹನಗಳಿಗೆ ಹಾನಿಯನ್ನುಂಟು ಮಾಡಿದ್ದರು. 15 ಪೊಲೀಸರು ಮತ್ತು 4ರೈಲ್ವೆ ಸಿಬ್ಬಂದಿಗಳು ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News