×
Ad

ಜಿಪಂ-ತಾಪಂ ಚುನಾವಣೆ; ಮುಖ್ಯಮಂತ್ರಿ ಜೊತೆ ಡಿಕೆಶಿ ಚರ್ಚೆ

Update: 2016-02-08 23:14 IST

ಬೆಂಗಳೂರು, ಫೆ.8: ಉಪ ಚುನಾವಣೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಗೆಲುವಿಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ ಮುಖ್ಯಮಂತ್ರಿಯ ಸರಕಾರಿ ನಿವಾಸ ಕಾವೇರಿಗೆ ತಮ್ಮ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಜೊತೆ ಖಾಸಗಿ ಕಾರಿನಲ್ಲಿ ಬಂದ ಶಿವಕುಮಾರ್ ಚುನಾವಣಾ ರಣತಂತ್ರದ ಕುರಿತು ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು.
ದೇವೇಗೌಡ ವಿರುದ್ಧ ವಾಗ್ದಾಳಿ: 2004ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗುವ ಸಂದರ್ಭದಲ್ಲಿ ಎಸ್.ಎಂ.ಕೃಷ್ಣ ಹಾಗೂ ಡಿ.ಕೆ.ಶಿವಕುಮಾರ್‌ರನ್ನು ದೂರ ಇಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಶರತ್ತು ಹಾಕಿದ್ದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಶರತ್ತನ್ನು ಪಕ್ಷದ ಹಿತದೃಷ್ಟಿಯಿಂದ ನಾವು ಒಪ್ಪಿಕೊಂಡೆವು. ಆದರೆ, ಆ ವಿಚಾರವನ್ನು ಈಗ ಯಾಕೆ ಪ್ರಸ್ತಾಪ ಮಾಡುತ್ತಿದ್ದಾರೆ. ಅಲ್ಲದೆ, ಸತ್ಯವನ್ನು ಮರೆಮಾಚಿ ಜನರ ಎದುರು ಸುಳ್ಳನ್ನು ಯಾಕೆ ಹೇಳುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದರು.
ಭಿನ್ನಮತೀಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಆರೋಪ ಎದುರಿಸುತ್ತಿರುವ ಶಾಸಕ ಝಮೀರ್‌ಅಹ್ಮದ್‌ಖಾನ್ ವಿರುದ್ಧ ಕ್ರಮ ಕೈಗೊಳ್ಳುವುದು, ಬಿಡುವುದು ಜೆಡಿಎಸ್‌ಗೆ ಬಿಟ್ಟ ವಿಚಾರ. ಅವರ ಪಕ್ಷದ ಬಗ್ಗೆ ನಾವು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.
 ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದಲ್ಲಿ ಇಂದು ಸಂಜೆ ಹಾಗೂ ಫೆ.11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಹಿರಿಯ ನಾಯಕ ಎಸ್.ಎಂ.ಕೃಷ್ಣ ಹಾಗೂ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೂ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News