ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಆರೋಪಿ ಕೋರ್ಟ್ ಗೆ ಶರಣು
ತಲಶ್ಯೇರಿ, ಫೆ.12: ಮಾವೊವಾದಿ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸಿಸ್ಟ್)ದ ಜಿಲ್ಲಾ ಕಾರ್ಯದರ್ಶಿ ಪಿ.ಜಯರಾಜನ್ ಶುಕ್ರವಾರ ತಲಶ್ಯೇರಿ ಜಿಲ್ಲಾ ಹಾಗೂ ಸೆಶನ್ಸ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತ ಇ .ಮನೋಜ್ ಕೊಲೆ ಪ್ರಕರಣದ ಆರೋಪಿಯಾಗಿರುವ ಜಯರಾಜನ್ ಫೆಬ್ರವರಿ 11ರಂದು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿತ್ತು. ಆ ಬಳಿಕ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಆತನ ಬಂಧನಕ್ಕೆ ಬಲೆ ಬೀಸಿತ್ತು. ಅಸ್ವಸ್ಥತೆಯ ಕಾರಣದಿಂದಾಗಿ ಪರಿಯಾರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಾಗಿದ್ದ ಜಯರಾಜನ್, ಶುಕ್ರವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದ.
ನ್ಯಾಯಾಲಯವು ಆತನಿಗೆ ಮಾರ್ಚ್ 11ರವರೆಗೆ ನ್ಯಾಯಾಂಗ ಕಸ್ಟಡಿ ವಿಧಿಸಿದ್ದು, ಆತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯನ್ನು ಹೊರಿಸಲಾಗಿದೆ. ಜಯರಾಜನ್‌ನನ್ನ್ನು ಆಸ್ಪತ್ರೆಗೆ ವರ್ಗಾಯಿಸಬೇಕೆಂಬ ಆತನ ವಕೀಲರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇಂದು ಶರಣಾಗತನಾದ ಜಯರಾಜನ್‌ನನ್ನು ಇಲ್ಲಿನ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುವುದು.
ಮನೋಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಜಯರಾಜನ್‌ನನ್ನು ತಮ್ಮ ವಶಕ್ಕೆ ನೀಡಬೇಕೆಂದು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
.