ಮಂಗಳೂರು : ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 1000 ಅಂಗನವಾಡಿ ನಿರ್ಮಾಣ -ಪ್ರಭಾಷ್ ಚಂದ್ರ ರೈ
ಮಂಗಳೂರು, ಫೆ, 17; ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ 1000 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಆಯುಕ್ತರಾದ ಪ್ರಭಾಷ್ ಚಂದ್ರ ರೈ ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾ ಪಂಚಾಯತ್‌ನಲ್ಲಿ ಈ ಸಂಬಂಧ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಗಳಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ನರೇಗಾ ವತಿಯಿಂದ ರೂ. 5 ಲಕ್ಷ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂ. 6.6 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿ ದ.ಕ ಜಿಲ್ಲೆಯಲ್ಲಿ 36 ಅಂಗನವಾಡಿ ಕಟ್ಟಡಗಳನ್ನು ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು. ಜಿಲ್ಲೆಯಲ್ಲಿ ಗ್ರಾಮ ಪಂಚಾಯ ಗಳ ವತಿಯಿಂದ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಕನಿಷ್ಠ 15 ತೆರೆದ ಬಾವಿಗಳನ್ನು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿ, ಅರ್ಹರಿಗೆ ಉದ್ಯೋಗ ಕಾರ್ಡ್‌ಗಳನ್ನು ವಿತರಿಸುವ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಐ ಶ್ರೀ ವಿದ್ಯಾ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಜನಸಂಖ್ಯೆ ಇದ್ದು ಈ ಜಿಲ್ಲೆಯಲ್ಲಿ ಅಡಿಕೆ ಬೆಳೆ ಪ್ರಧಾನ ಬೆಳೆಯಾಗಿದ್ದು ರೈತರು ನರೇಗಾ ಯೋಜನೆಯನ್ನು ಬಳಸಿಕೊಂಡು ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ತಿಳಿಸಿದರು. ಇದೇ ರೀತಿ ಮುಂದಿನ ದಿನಗಳಲ್ಲಿ ತೆಂಗು ಬೆಳೆಗೂ ಸಹ ನರೇಗಾ ಯೋಜನೆ ವಿಸ್ತರಿಸುವ ಗುರಿಹೊಂದಲಾಗಿದೆ ಎಂದು ಅವರು ತಿಳಿಸಿದರು. ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್ , ಓಂಬುಡ್ಸ್‌ಮನ್ ನರಸಿಂಹನ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ: ಹನುಮಂತಪ್ಪ ಉಪಸ್ಥಿತರಿದ್ದರು.