ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ಬೆಂಗಳೂರು, ಫೆ.17: ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ನ ಎರಡನೆ ಹಂತದ ಚುನಾವಣೆಯ ಬಹಿರಂಗ ಪ್ರಚಾರವು ಗುರುವಾರ ಸಂಜೆ ಅಂತ್ಯಗೊಳ್ಳುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಪ್ರಚಾರದ ಭರಾಟೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ, ಬೀದರ್, ಬಳ್ಳಾರಿ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಫೆ.20ರಂದು ಮತದಾನ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದಿಂದ ಉತ್ಸಾಹದಲ್ಲಿರುವ ಪ್ರತಿಪಕ್ಷ ಬಿಜೆಪಿ ಮತದಾರರನ್ನು ಸೆಳೆಯಲು ಮತ್ತಷ್ಟು ಪ್ರಯತ್ನ ನಡೆಸುತ್ತಿದೆ.
ಆಡಳಿತರೂಢ ಕಾಂಗ್ರೆಸ್ ಪಕ್ಷ ಶತಾಯಗತಾಯ ಕನಿಷ್ಠ 15 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ 100 ತಾಲೂಕು ಪಂಚಾಯತ್‌ಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರ್ಯತಂತ್ರ ರೂಪಿಸಿದ್ದು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಸಂಸದರನ್ನು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕ್ರಮ ಕೈಗೊಂಡಿದೆ.
ಇನ್ನುಳಿದಂತೆ ಜೆಡಿಎಸ್ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹವಣಿಸುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಮುಖವಾಗಿ ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನಿರಂತರವಾಗಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಸಂಸದೆ ರಮ್ಯಾ, ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು ಪ್ರಚಾರ ಕೈಗೊಂಡಿದ್ದರೆ, ಬಿಜೆಪಿ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸೇರಿದಂಥೆ ಇನ್ನಿತರರು ಸಾಥ್ ನೀಡಿದ್ದಾರೆ.