×
Ad

ಫೆ.24ರಿಂದ ಪುಸ್ತಕ ಪ್ರದರ್ಶನ-ಮಾರಾಟ ಮೇಳ

Update: 2016-02-20 23:35 IST

ಕಲಬುರ್ಗಿ ಹೆಸರಿನ ವೇದಿಕೆಯಲ್ಲಿ 70 ಮಳಿಗೆ
ಬೆಂಗಳೂರು, ಫೆ. 20: ರಾಜ್ಯ ಕೇಂದ್ರ ಗ್ರಂಥಾಲಯದ ಶತಮಾನೋತ್ಸವದ ಅಂಗವಾಗಿ ಫೆ.24ರಿಂದ ಐದು ದಿನಗಳ ಕಾಲ ಕನ್ನಡ ಪುಸ್ತಕ ಪ್ರದರ್ಶನ ಹಾಗೂ ರಿಯಾಯಿತಿ ದರದ ಪುಸ್ತಕ ಮಾರಾಟ ಮೇಳವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ಶನಿವಾರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ್ ಎಸ್. ಹೊಸಮನಿ ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಮೇಳದಲ್ಲಿ ಕನಿಷ್ಠ ಶೇ.15ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು. ಮೇಳದಲ್ಲಿ ಹಿರಿಯ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ವೇದಿಕೆಯಲ್ಲಿ ಸುಮಾರು 70 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ 40 ಮಂದಿ ಪ್ರಕಾಶಕರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಪುಸ್ತಕ ಪ್ರಕಾಶಕರಿಗೆ ಮತ್ತು ಓದುಗರಿಗೆ ಉತ್ತೇಜನ ನೀಡಲು ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಮೇಳದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಶಾಲಾಕಾಲೇಜುಗಳಿಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ 100 ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
 ಮೇಳದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು, ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಉದ್ಘಾಟಿಸಲಿದ್ದಾರೆ. ಅಂದು ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ, ಹಿರಿಯ ಕವಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೇಳದ ಸಮಾರೋಪ ಸಮಾರಂಭದಲ್ಲಿ ಕವಿ ಡಾ.ಸಿದ್ಧಲಿಂಗಯ್ಯ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಅಭಿನವ ಪ್ರಕಾಶನದ ಮುಖ್ಯಸ್ಥ ನಾ.ರವಿಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಮಹಾದೇವಯ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News