ಮಾ.26ರಂದು ರಾಜ್ಯ ರೈಲ್ವೆ ಬಂದ್: ವಾಟಾಳ್ ನಾಗರಾಜ್

Update: 2016-03-01 18:22 GMT

ಬೆಂಗಳೂರು, ಮಾ.1: ಮಹದಾಯಿ ಯೋಜನೆಯ ಜಾರಿ ಮಾಡುವಲ್ಲಿ ಕೇಂದ್ರ ಸರಕಾರ ನಿರ್ಲಕ್ಷ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಮಾ.26ರಂದು ರಾಜ್ಯದ ಎಲ್ಲ ರೈಲು ನಿಲ್ದಾಣಗಳನ್ನು ಬಂದ್ ಮಾಡಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನತೆ ನೀರಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದರೂ, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದ್ದರೂ, ಪ್ರಧಾನಿ ಮೋದಿ ಇತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡು ಬಾರಿ ಭೇಟಿ ಕೊಟ್ಟಿದ್ದಾರೆ. ಆದರೆ, ಮಹದಾಯಿ ಯೋಜನೆ ಕುರಿತು ಪ್ರಸ್ತಾಪ ಮಾಡಿಲ್ಲ. ಬಿಜೆಪಿ ಸಂಸದರು ಸಹ ಯೋಜನೆ ಜಾರಿ ಮಾಡಬೇಕು ಎಂದು ಒಂದು ಮನವಿ ಪತ್ರ ನೀಡಿಲ್ಲ. ರಾಜಕೀಯ ಪಕ್ಷಗಳು ಜನತೆಗೆ ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.

ನೀರಿನ ಕುರಿತು ಚರ್ಚಿಸಲಿ: ರಾಜ್ಯದಲ್ಲಿ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಶಾಸನ ಸಭೆಯಲ್ಲಿ ಕುಡಿಯುವ ನೀರಿನ ಕುರಿತು ಚರ್ಚೆಯಾಗಲಿ. ಅದು ಕೇವಲ ಕಳಸಾ ಬಂಡೂರಿ ಯೋಜನೆ ಮಾತ್ರವಲ್ಲ. ಮೇಕೆದಾಟು ಹಾಗೂ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರವಾಗಿ ಚರ್ಚೆಯಾಗಲಿ ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ಮಂಜುನಾಥ ದೇವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News