×
Ad

ಶ್ರೀಲಂಕಾ ತಂಡದ ನಾಯಕತ್ವ ತ್ಯಜಿಸಿದ ಮಾಲಿಂಗ

Update: 2016-03-07 23:32 IST

 ಕೊಲಂಬೊ, ಮಾ.7: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್ ಲಸಿತ್ ಮಾಲಿಂಗ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ.

ಮುಂಬರುವ ಭಾರತದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡವನ್ನು ನಾಯಕನಾಗಿ ಮುನ್ನಡೆಸುವುದಿಲ್ಲ.

ಮಾಲಿಂಗ ಕಳೆದ ಆವೃತ್ತಿಯ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ನಾಯಕನಾಗಿದ್ದು, ತಂಡಕ್ಕೆ ಚೊಚ್ಚಲ ಪ್ರಶಸ್ತಿ ಗೆಲ್ಲಲು ಮಾರ್ಗದರ್ಶನ ನೀಡಿದ್ದರು. ಇದೀಗ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಏಕದಿನ ಹಾಗೂ ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸುತ್ತಿರುವ ಆಲ್‌ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್ ಇದೀಗ ಎಲ್ಲ ಮೂರು ಮಾದರಿಯ ಪಂದ್ಯದಲ್ಲಿ ತಂಡದ ನಾಯಕನಾಗಿರುತ್ತಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮೂಲಗಳು ತಿಳಿಸಿವೆ.

ಮಾಲಿಂಗ ಕಳೆದ ರಾತ್ರಿ ಪತ್ರದ ಮೂಲಕ ನಾಯಕತ್ವವನ್ನು ತ್ಯಜಿಸುವುದಾಗಿ ತಿಳಿಸಿದ್ದಾರೆ. ಅವರು ತಂಡದ ಆಯ್ಕೆಗೆ ಲಭ್ಯವಿರುತ್ತಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷ ಮೋಹನ್ ಡಿ ಸಿಲ್ವಾ ತಿಳಿಸಿದ್ದಾರೆ.

ಮಾಲಿಂಗ ರವಿವಾರ ಮೀರ್ಪುರದಲ್ಲಿ ಕೊನೆಗೊಂಡ ಏಷ್ಯಾಕಪ್ ಟ್ವೆಂಟಿ-20 ಟೂರ್ನಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿದ್ದಾರೆ.

ಭಾರತ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧ ಸೋತಿದ್ದ ಶ್ರೀಲಂಕಾ ಟೂರ್ನಿಯಿಂದ ಬೇಗನೆ ಹೊರ ನಡೆದಿತ್ತು. ಟ್ವೆಂಟಿ-20 ಇತಿಹಾಸದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News