ಬೆಂಗಳೂರು: ರಾಜು ಕೊಲೆ ಪ್ರಕರಣ, ತನಿಖೆಯ ಹಾದಿ ತಪ್ಪಿಸುತ್ತಿರುವ ಬಿಜೆಪಿ - ಶಾಫಿ ಬೆಳ್ಳಾರೆ
ಬೆಂಗಳೂರು, ಮಾ.14: ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಪಿಎಫ್‌ಐ ಕೈವಾಡವಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇದು ತನಿಖೆಯ ದಾರಿತಪ್ಪಿಸುವ ಪ್ರಯತ್ನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವಾಗಲೇ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ತನಿಖೆಯ ದಾರಿಯನ್ನು ತಪ್ಪಿಸಲು ಪ್ರಯತ್ನಿಸಲಾಗುತ್ತಿದೆ. ಈ ಹಿಂದೆ ಶಿವಮೊಗ್ಗದಲ್ಲಿ ಮಂಜುನಾಥ್ ಕೊಲೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡವಿದೆ ಎಂದು ಬಿಜೆಪಿಯವರು ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿ ಪ್ರತಿಭಟನೆಗಳನ್ನು ನಡೆಸಿದ್ದರು. ಆದರೆ ನಂತರದ ತನಿಖೆಯಲ್ಲಿ ಅದು ಕುಟುಂಬ ಕಲಹಕ್ಕೆ ಸಂಬಂಧಪಟ್ಟ ಕೊಲೆ ಎಂದು ತಿಳಿದುಬಂದಿತ್ತು. ಮೈಸೂರಿನ ಪ್ರಕರಣವನ್ನು ಕೋಮುಗಲಭೆಯನ್ನಾಗಿ ಪರಿವರ್ತಿಸಿ ರಾಜಕೀಯ ಲಾಭಗಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದೆ.
ಪೊಲೀಸ್ ಇಲಾಖೆ ರಾಜು ಕೊಲೆ ಪ್ರಕರಣವನ್ನು ನಿಷ್ಪಕ್ಷವಾಗಿ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.