ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ: ಜಗದೀಶ್ ಶೆಟ್ಟರ್
ಬೆಂಗಳೂರು, ಮಾ.14: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತ ರಾಜು(32) ಉದಯಗಿರಿಯಿಂದ ಮನೆಗೆ ತೆರಳುವ ಸಂದರ್ಭದಲ್ಲಿ ವಿನಾಯಕ ಟೀ ಸ್ಟಾಲ್ ಮುಂದೆ ನಿಂತು ಚಹಾ ಸೇವಿಸುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಹಿಂದಿನಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯಿಂದ ರಾಜ್ಯದಲ್ಲಿ ಶಾಂತಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಶಾಂತಿ ಸುವ್ಯವಸ್ಥೆ ಹಾಳಾಗಲು ಕಾರಣವಾಗಿದೆ. ರಾಜ್ಯದಲ್ಲಿ ಪದೇ ಪದೇ ಬಿಜೆಪಿ, ಆರೆಸೆಸ್ಸ್ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೊಲೆ, ಹಲ್ಲೆಗಳು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಬಂಧಿಸುವಂತಹ ಕೆಲಸ ನಡೆಯುತ್ತಿವೆ ಎಂದು ಅವರು ದೂರಿದ್ದಾರೆ.
ಸರಕಾರವು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜು ಕೊಲೆಯಾದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸುವ್ಯವಸ್ಥೆ ಕದಡಲು ಕಾರಣವಾಗಿರುವ ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.