ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮಾ.15: ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಬೀದರ್ ಜಿಲ್ಲೆಯ ಔರಾದ್‌ನಲ್ಲಿ ಜವಾಹರಲಾಲ್ ನೆಹರೂ ನವೋದಯ ಶಾಲೆ ಪ್ರಾರಂಭಿಸಲು ಕೇಂದ್ರ ಸರಕಾರ ಆದೇಶಿಸಿದ್ದರೂ ಇಲ್ಲಿಯವರೆಗೂ ಪ್ರಾರಂಭಿಸದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಸಮಾಜ ಸೇವಕ ಗುರುನಾಥ ದೊಡ್ಡಿ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿಮಳಿಮಠ ಅವರಿದ್ದ ನ್ಯಾಯಪೀಠ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. 2004ರ ಸೆಪ್ಟಂಬರ್‌ನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯಿಂದ ಬೀದರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಜಿಲ್ಲೆಯ ಔರಾದ್‌ನಲ್ಲಿ ಜವಾಹರ್‌ಲಾಲ್ ನವೋದಯ ಶಾಲೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಯಾವುದೇ ರೀತಿಯ ಬೆಳವಣಿಗೆಗಳು ಕಂಡು ಬಂದಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ, ಮುಖ್ಯಮಂತ್ರಿಗಳು ಮತ್ತು ಸಂಸದರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೂ, ಇಲ್ಲಿಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಔರಾದ್‌ನಲ್ಲಿ ಶೀಘ್ರವಾಗಿ ನವೋದಯ ಶಾಲೆ ಪ್ರಾರಂಭ ಮಾಡುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.