×
Ad

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ 8 ಸದಸ್ಯರ ನೇಮಕ: ದಿನೇಶ್ ಗುಂಡೂರಾವ್

Update: 2016-03-21 22:47 IST

ಬೆಂಗಳೂರು, ಮಾ.21: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳಲ್ಲಿ ಒಟ್ಟು 8 ಸದಸ್ಯರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 ಸೋಮವಾರ ವಿಧಾನ ಪರಿಷತ್‌ನ ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಸಂದರ್ಭ ದಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿ’ಸೋಜಾ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು 31 ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳಲ್ಲಿ ಅಧ್ಯಕ್ಷರ ಹುದ್ದೆಗಳು ಖಾಲಿ ಇಲ್ಲವಾಗಿದೆ. ಆದರೆ, ಪರಿಹಾರ ವೇದಿಕೆಗಳಲ್ಲಿ ಖಾಲಿ ಇರುವ 8 ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

 ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 1087 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 212 ಪ್ರಕರಣಗಳು ಇತ್ಯರ್ಥವಾಗಿ 875 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ ಎಂದು ತಿಳಿಸಿದರು. ಗ್ರಾಹಕರ ಹಕ್ಕುಗಳ ಕಾಯ್ದೆಯಡಿ ಜನರಿಗೆ ಅರಿವು ಮೂಡಿಸಲು ರಾಜ್ಯದ ಪ್ರತಿ ವಿಭಾಗಕ್ಕೆ 2 ಲಕ್ಷ ರೂ.ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಇಲಾಖಾ ಅಧಿಕಾರಿಗಳಿಗೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಪದಾಧಿಕಾರಿಗಳಿಗೆ ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರತಿ ವರ್ಷ ಡಿ.24ರಂದು ಆಚರಿಸುವ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಮಾರ್ಚ್ 15ರಂದು ಆಚರಿಸಲಾಗುವ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆಯಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳನ್ನೊಳಗೊಂಡಂತೆ ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ಗ್ರಾಹಕ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News