ಬರ ಪರಿಸ್ಥಿತಿ: ಒಂದು ದಿನ ವಿಶೇಷ ಚರ್ಚೆ
Update: 2016-03-21 23:28 IST
ಬೆಂಗಳೂರು, ಮಾ.21: ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಒಂದು ದಿನ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಜೆಡಿಎಸ್‌ನ ಹಿರಿಯ ಸದಸ್ಯ ಶಿವಲಿಂಗೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ರಾಜ್ಯದಲ್ಲಿ ಬರ ಸ್ಥಿತಿಯ ಬಗ್ಗೆ ನನಗೆ ಗೊತ್ತಿದ್ದು, ಈ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ. ಆ ಸಂಬಂಧ ರಾಜ್ಯ ಸರಕಾರ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಸೂಕ್ತ ಉತ್ತರ ನೀಡಬೇಕಿದೆ. ಹೀಗಾಗಿ ಒಂದು ದಿನ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸುವೆ ಎಂದು ಭರವಸೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ನಾವೂ ಸಿದ್ಧ ಎಂದು ಸಮ್ಮತಿಸಿದರು.