×
Ad

ಪರಿಸರಕ್ಕೆ ಧಕ್ಕೆಯಾಗದ ರೀತಿ ಅಭಿವೃದ್ಧಿ ಕಾಮಗಾರಿ ಕೈಗೊಳಿ್ ಎಸ್.ಪಿ.ಷಡಕ್ಷರಿ

Update: 2016-03-27 22:32 IST

ಚಿಕ್ಕಮಗಳೂರು, ಮಾ.27: ಪರಿಸರಕ್ಕೆ ಯಾವುದೇ ರೀತಿ ಧಕ್ಕೆಯಾಗದಂತೆ ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಪಿ.ಷಡಕ್ಷರಿ ಸ್ವಾಮಿ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಬಹಳಷ್ಟು ಪ್ರವಾಸಿ ತಾಣಗಳಿವೆ. ಅದರಲ್ಲಿ ಮಲೆನಾಡು ಭಾಗದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಅತೀ ಸೂಕ್ಷ್ಮವಾದ ಪ್ರವಾಸಿ ಸ್ಥಳಗಳಿವೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಅಭಿವೃದ್ಧಿ ಕಾಮಗಾರಿ ವೇಳೆ ಆ ಪರಿಸರಕ್ಕೆ ಧಕ್ಕೆಯಾಗಬಾರದು. ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಬಹಳಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಚ್ಚರಿಸಿದರು.

ಪರಿಸರಕ್ಕೆ ಯಾವುದೇ ರೀತಿ ಧಕ್ಕೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಸಮಿತಿ ನೀತಿ ನಿಯಮವನ್ನು ರೂಪಿಸಬೇಕು. ಆ ಸಂಬಂಧ ಕರಡು ಪ್ರತಿಯನ್ನು ಸಿದ್ಧಪಡಿಸಬೇಕು. ಜಿಲ್ಲೆಯಲ್ಲಿರುವ ಹೋಂಸ್ಟೇಗಳ ಮಾಲಕರು ತಮ್ಮ ಲಾಭಕ್ಕಾಗಿ ನೀತಿ ನಿಯಮವನ್ನು ಉಲ್ಲಂಘಿಸಬಾರದು. ಮಾಲಕರು ತಮ್ಮ ಮನೆಯಲ್ಲಿ ಹೋಂಸ್ಟೇ ಮಾಡಿಕೊಂಡು ಅದರಲ್ಲಿ ಕೇವಲ ಐದು ಕೊಠಡಿಗಳನ್ನು ನೀಡಲು ಮಾತ್ರ ಅವಕಾಶವಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಲಾಭಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ಸರಿಯಾದ ಕ್ರಮವಲ್ಲ ಎಂದರು.

ಪತ್ರಕರ್ತ ಸ.ಗಿರಿಜಾಶಂಕರ್ ಮಾತನಾಡಿ, ಜಿಲ್ಲೆಯಲ್ಲಿರುವ ಜಲಪಾತಗಳಿಗೆ ಆಗಮಿಸುವ ಪ್ರವಾಸಿಗರು ಅದರ ಮೇಲ್ಭಾಗಕ್ಕೆ ತೆರಳಿ ಪರಿಸರವನ್ನು ಅಪವಿತ್ರಗೊಳಿಸುತ್ತಿರುವುದು ಕಂಡು ಬಂದಿದ್ದು, ಇದರಿಂದಾಗಿ ಜಲಪಾತಗಳ ನೀರು ಕಲುಷಿತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಲ್ಲಿ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು. ಜಲಪಾತಗಳ ಮೇಲ್ಭಾಗಕ್ಕೆ ಪ್ರವೇಶ ನಿಷೇಧಿತವೆಂದು ಘೋಷಿಸಬೇಕು ಎಂದು ಸಲಹೆ ಮಾಡಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಪ.ಜಾತಿ ಮತ್ತು ಪ.ವರ್ಗಗಳ ನಿರುದ್ಯೋಗಿ ಯುವಕರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಬಾಡಿಗೆ ಟ್ಯಾಕ್ಸಿ ಕೊಳ್ಳಲು 2 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. ಆ ಸಂಬಂಧ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಜನಸಂಖ್ಯೆ ಮತ್ತು ಫಲಾನುಭವಿಗಳ ವಯಸ್ಸನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದರು.

ಕಡೂರು ಶಾಸಕ ವೈ.ಎಸ್.ವಿ.ದತ್ತ ಮಾತನಾಡಿ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ವಾರ್ಷಿಕವಾಗಿ 1 ಕೋಟಿಗೂ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡಲಾಗುವ ಬಾಡಿಗೆ ಟ್ಯಾಕ್ಸಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.

ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಜಿಲ್ಲೆಯ ಪ್ರವಾಸಿ ತಾಣಗಳ ಸುಂದರ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಪ್ರವಾಸಿಗರಿಗೆ ಕಟ್ಟುಪಾಡುಗಳನ್ನು ವಿಧಿಸಬೇಕು ಎಂದು ಸಲಹೆ ಮಾಡಿದರು.

ಸಭೆಯಲ್ಲಿ ಎಂಎಲ್‌ಸಿ ಎಂ.ಕೆ.ಪ್ರಾಣೇಶ್, ಉಪ ವಿಭಾಗಾಧಿಕಾರಿ ಆರ್.ಸ್ನೇಹಲ್, ಜಿಪಂ ಉಪ ಕಾರ್ಯದರ್ಶಿ ರಾಜ್‌ಗೋಪಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News