ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆ: ಶಿವಮೊಗ್ಗದಲ್ಲಿ ಸಾಲುಸಾಲು ಪ್ರತಿಭಟನೆ
ಶಿವಮೊಗ್ಗ, ಮಾ. 31: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಮತ್ತೊಮ್ಮೆ ಸೋರಿಕೆಯಾಗಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರ ತವರೂರು ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುರುವಾರ ವಿವಿಧ ಸಂಘಟನೆಗಳು ನಗರದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಎನ್‌ಎಸ್‌ಯುಐ, ಎಬಿವಿಪಿ, ಯುವ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಪತ್ರ ಅರ್ಪಿಸಿದರು.
ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಪಿಯು ಶಿಕ್ಷಣ ಮಂಡಳಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರೆ, ಎಬಿವಿಪಿ ಹಾಗೂ ಬಿಜೆಪಿ ಕಾರ್ಯಕರ್ತರು ಶಿಕ್ಷಣ ಸಚಿವರ ರಾಜೀನಾ
<ೆುಗೆ ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ನಡುವೆಯೇ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕೂಡ ಸೋರಿಕೆಯಾಗಿ ಪರೀಕ್ಷೆ ಮುಂದೂಡುವಂತಾಗಿದೆ. ಇದು ನಿಜಕ್ಕೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ, ಕರ್ತವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ತಕ್ಷಣವೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಮುಖಂಡರಾದ ಸಿ.ಜೆ.ಮಧು ಸೂಧನ್, ಕೆ.ಚೇತನ್, ಜಿಲ್ಲಾಧ್ಯಕ್ಷ ಶ್ರೀಜಿತ್ ಸೇರಿದಂತೆ ಮತ್ತಿತರರಿದ್ದರು. ಎಬಿವಿಪಿ: ಸಂಘಟನೆಯ ಕಾರ್ಯಕರ್ತರು ಡಿ.ವಿ.ಎಸ್.ವೃತ್ತದಿಂದ ಡಿ.ಸಿ. ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಈ ಮಧ್ಯೆ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿ.ಸಿ. ಕಚೇರಿ ಬಳಿ ಧರಣಿ ಮಾಡಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಅರ್ಪಿಸಿದರು.
<ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕೂಡ ಸೋರಿಕೆಯಾಗಿ ಪರೀಕ್ಷೆ ಯನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಇದು ರಾಜ್ಯ ಸರಕಾರಕ್ಕೆ ಬೇಜವಾಬ್ದಾರಿ ಧೋರಣೆಗೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ತತ್‌ಕ್ಷಣವೇ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಯುವ ಕಾಂಗ್ರೆಸ್:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಲು ಪದವಿ ಪೂರ್ವ ಶಿಕ್ಷಣ ಮಂಡಳಿ ಅಧಿಕಾರಿಗಳ ಬೇಜವಾಬ್ದಾರಿ, ಕರ್ತವ್ಯ ಲೋಪವೇ ಕಾರಣವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಲು ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
<
ಪ್ರತಿಭಟನೆಯಲ್ಲಿ ಸಂಘಟನೆಯ ಹಿರಿಯ ಮುಖಂಡ ಕೆ.ರಂಗನಾಥ್, ಟಿ.ವಿ.ರಂಜಿತ್, ಕಿರಣ್ ಸೇರಿದಂತೆ ಮೊದಲಾ ದವರಿದ್ದರು. ಬಿಜೆಪಿ: ಪಕ್ಷದ ಕಾರ್ಯಕರ್ತರು ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರ ಹಾಗೂ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರ ವಿರುದ್ಧ ಆರೋಪಗಳ ಸುರಿಮಳೆಗೈದರು. ತಕ್ಷಣವೇ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಾತಿನ ಚಕಮಕಿ
ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕೆಲ ಕಾರ್ಯಕರ್ತರು ಕೂಡ ಕೊಂಚ ದೂರದಲ್ಲಿ ನಿಂತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಕಾಂಗ್ರೆಸ್ ಪಿಯು ಬೋರ್ಡ್ ವಿರುದ್ಧ ಹಾಗೂ ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್ ಪ್ರತಿಭಟನೆ ಮುಕ್ತಾಯವಾದ ನಂತರ ನಿಮಗೆ ಅವಕಾಶ ಮಾಡಿಕೊಡುತ್ತೇವೆ. ಘೋಷಣೆ ಕೂಗದಂತೆ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರು ಕೂಡ ಪ್ರತಿಭಟನೆ ಮುಗಿಸಿ ಸ್ಥಳದಿಂದ ನಿರ್ಗಮಿಸಿದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಮಾತಿನ ಚಕಮಕಿಗಿಳಿದರು.