ಕೆಂಪೇಗೌಡ ವಿಮಾನ ನಿಲ್ದಾಣ ಉದ್ಯೋಗದಲ್ಲಿ 2,358 ಮಂದಿ ಕನ್ನಡಿಗರು: ರೋಷನ್‌ಬೇಗ್
Update: 2016-03-31 22:40 IST
ಬೆಂಗಳೂರು, ಮಾ. 31: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ 3,127 ಮಂದಿ ಉದ್ಯೋಗಿಗಳ ಪೈಕಿ 2,358 ಮಂದಿ ಕನ್ನಡಿಗರಿದ್ದಾರೆ ಎಂದು ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ಪಿಳ್ಳ ಮುನಿಶಾಮಪ್ಪ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದಲ್ಲಿ ವಿದ್ಯಾರ್ಹತೆ ಮತ್ತು ತಾಂತ್ರಿಕ ಕೌಶಲ್ಯತೆಗೆ ಅನುಗುಣವಾಗಿ ಕನ್ನಡಿಗರಿಗೆ ಆದ್ಯತೆಯ ಮೇರೆಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಅದಾಗ್ಯೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಸರಹದ್ದಿನಲ್ಲೆ ಹಲವು ಹೊರಗುತ್ತಿಗೆ ಕಂಪೆನಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಆಡಳಿತ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಅವರು ಉತ್ತರದಲ್ಲಿ ಸ್ಪಷ್ಟಣೆ ನೀಡಿದ್ದಾರೆ.