ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ರಾಮಪ್ರಸಾದ್
ಕಾರವಾರ.ಎ.2: ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಕುರಿತು ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕುಡಿಯುವ ನೀರಿನ ಪರಿಸ್ಥಿತಿ ಕುರಿತಾಗಿ ಮಾ.8ರಂದು ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಇದರಂತೆ ಬರಪೀಡಿತ ಎಂದು ಘೋಷಣೆ ಮಾಡಿರುವ ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸಹಾಯಕ ಆಯುಕ್ತರು, ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿನಿತ್ಯ ಸಮಸ್ಯೆ ಉದ್ಭವಿಸಬಹುದಾದ ಹಳ್ಳಿಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕುಡಿಯುವ ನೀರಿನ ಕಾರ್ಯಕ್ಕೆ ಆದ್ಯತೆ ನೀಡಲು ಸೂಚಿಸಲಾಗಿದ್ದು, ಅದರಂತೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕುಡಿಯುವ ನೀರಿನ ಕಾಮಗಾರಿಗಳಿಗೆ ಈಗಾಗಲೇ ಸಾಕಷ್ಟು ಅನುದಾನವನ್ನು ಆಯಾ ತಹಶೀಲ್ದಾರ್ ಅವರಿಗೆ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು ಪೂರೈಕೆಯ ಸಣ್ಣ ಪುಟ್ಟ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಕಾಮಗಾರಿಗಳಿಗೆ ಅನುದಾನದ ಕೊರತೆಯಿರುವುದಿಲ್ಲ. ಆದರೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಜನರಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಟ್ಯಾಂಕರ್ ಮೂಲಕ ನೀರು ಪೂರೈಕೆ: ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಅವಕಾಶ ನೀಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 32ಗ್ರಾಮ/ಮಜಿರೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಒಟ್ಟು 3,564 ಕುಟುಂಬಗಳಿಗೆ ಟ್ಯಾಂಕರ್ ಮೂಲಕ 3,14,500 ಲೀಟರ್ ನೀರು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.