ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ, ಎ.5: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಗಳನ್ನು ಸಕಾರಣವಿಲ್ಲದೆ ವಜಾಗೊಳಿಸುತ್ತಿದೆ. ಕೂಡಲೇ ಈ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ನಿಲ್ಲಿಸುವಂತೆ ಪ್ರಧಾನಮಂತ್ರಿಗೆ ತಾಕೀತು ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ರಾಷ್ಟ್ರಪತಿಯವರಿಗೆ ಮನವಿ ಮಾಡಿದೆ. ಈ ಸಂಬಂಧ ಮಂಗಳವಾರ ನಗರದ ಗೋಪಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸಿತು. ಕೇಂದ್ರ ಸರಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ‘ಮೋದಿಯವರು ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ’ ಎಂದು ದೂರಿದರು. ಪ್ರತಿಭಟನೆಯ ನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಕಾರ್ಯಕರ್ತರು ಮನವಿ ಪತ್ರ ನೀಡಿದರು.
ಆಕ್ರೋಶ: ಸಂವಿಧಾನ ಬದ್ಧವಾಗಿ, ಪ್ರಜಾಪ್ರಭುತ್ವಕ್ಕೆ ಅನುಗುಣವಾಗಿ ಆಯ್ಕೆಯಾದ ರಾಜ್ಯ ಸರಕಾರಗಳನ್ನು ಕೇಂದ್ರ ಸರಕಾರ ಸಕಾರಣವಿಲ್ಲದೆ, ಕೇವಲ ರಾಜಕೀಯ ಕಾರಣಗಳಿಗಾಗಿ ವಜಾಮಾಡುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈಗಾಗಲೇ ಉತ್ತರಾಖಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿದ್ದ ಕಾಂಗ್ರೆಸ್ ಸರಕಾರಗಳನ್ನು ಕೇಂದ್ರ ಸರಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದೆ. ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟು ತನ್ನ ಕ್ರಮವನ್ನು ಸಮರ್ಥಿಸಿದೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಜನತಂತ್ರಕ್ಕೆ ಮಾಡಿದ ಅಪಮಾನವಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ತಕ್ಷಣ ಮಧ್ಯ ಪ್ರವೇಶಿಸಬೇಕು. ಈ ಸಂಬಂಧ ಕೇಂದ್ರ ಸರಕಾರಕ್ಕೆ ಸೂಕ್ತ ಎಚ್ಚರಿಕೆ ನೀಡಬೇಕು. ಪ್ರಜಾಪ್ರಭುತ್ವ ರಕ್ಷಿಸುವ ಕೆಲಸಕ್ಕೆ ಮುಂದಾಗುವಂತೆ ಸೂಚನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಎಐಸಿಸಿ ಸದಸ್ಯ ಮಂಜುನಾಥ್ ಭಂಡಾರಿ, ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮೇಯರ್ ಮರಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.