ನಿಷ್ಠಾವಂತರಿಗೆ ಪಕ್ಷದಲ್ಲಿ ಅವಕಾಶ: ಸತೀಶ್ ಜಾರಕಿಹೊಳಿ
ಚಿಕ್ಕಮಗಳೂರು, ಎ.7: ಪಕ್ಷದಲ್ಲಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಹೆಚ್ಚಿನ ಅವಕಾಶವನ್ನು ನೀಡಲಾಗುವುದು ಎಂದು ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜೀವಾಳ. ಅವರ ನಿರಂತರ ಪ್ರಾಮಾಣಿಕ ಕೆಲಸಗಳಿಂದ ಪಕ್ಷ ಬಲವರ್ಧನೆಗೊಳ್ಳಲು ಸಾಧ್ಯ. ಜಿಪಂ, ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಒಳ್ಳೆಯ ಸಾಧನೆ ಮಾಡಿದೆ. ಅಭಿವೃದ್ಧಿ ಕೆಲಸಗಳಲ್ಲಿಯೂ ಮುಂಚೂಣಿಯಲ್ಲಿದ್ದು ಸರಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಹೇಳಿದರು.
ರಾಜ್ಯ ಸರಕಾರ ಜನಪರ ಯೋಜನೆಗಳನ್ನು ಘೋಷಿಸಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ. ಯಾವುದೇ ಹಗರಣಗಳಿಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದೆ ಎಂದರು.
ಈ ಸಮಯದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಿಎಲ್.ವಿಜಯ್‌ಕುಮಾರ್, ಶಾಸಕ ಜಿ.ಎಚ್. ಶ್ರೀನಿವಾಸ್, ಮಾಜಿ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಎಂಎಲ್.ಮೂರ್ತಿ, ಉಪಾಧ್ಯಕ್ಷ ಶಾಂತೇಗೌಡ, ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ, ಸಿಡಿಎ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ, ಎಪಿಎಂಸಿ ಅಧ್ಯಕ್ಷ ಚಂದ್ರೇಗೌಡ, ಮುಖಂಡರಾದ ಕೆ.ಮಹ್ಮದ್, ಶಿವಾನಂದಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.