ಪ್ರಗತಿ ಪರಿಶೀಲನೆಗೆ ಸಂಪುಟ ಉಪ ಸಮಿತಿಗಳ ರಚನೆ
ಬೆಂಗಳೂರು, ಎ.13: ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನ ಹಾಗೂ ಅಗತ್ಯ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ಎ.15ರಿಂದ 30ರ ವರೆಗೆ ವಿವಿಧ ಜಿಲ್ಲೆಗಳು ಹಾಗೂ ಅವಶ್ಯವಿರುವ ಪ್ರದೇಶಗಳಲ್ಲಿ ಸ್ಥಳ ಪರಿಶೀಲಿಸಿ ವರದಿ ನೀಡಲು ಕಂದಾಯ ವಿಭಾಗವಾರು ಸಂಪುಟದ ಉಪ ಸಮಿತಿಗಳನ್ನು ರಚಿಸಲಾಗಿದೆ.
ಬೆಂಗಳೂರು ವಿಭಾಗ: ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ಸಮಿತಿಯಲ್ಲಿದ್ದು, ಸಮನ್ವಯ ಅಧಿಕಾರಿಯಾಗಿ ಕಂದಾಯ ಇಲಾಖೆ(ವಿಪತ್ತು ನಿರ್ವಹಣೆ) ಸರಕಾರದ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ.
ಕಲಬುರ್ಗಿ ವಿಭಾಗ: ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್, ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಸಮಿತಿಯಲ್ಲಿದ್ದು, ಸಮನ್ವಯ ಅಧಿಕಾರಿಯಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ನಿಯೋಜಿಸಲಾಗಿದೆ.
ಬೆಳಗಾವಿ ವಿಭಾಗ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ವಿಜ್ಞಾನ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್, ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಕೃಷ್ಣಾ ಬೈರೇಗೌಡ ಸಮಿತಿಯಲ್ಲಿದ್ದು, ಸಮನ್ವಯ ಅಧಿಕಾರಿಯಾಗಿ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ.
ಮೈಸೂರು ವಿಭಾಗ: ಕಾನೂನು ಸಚಿವ ಜಯಚಂದ್ರ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಹಾಗೂ ಆಹಾರ ಸಚಿವ ದಿನೇಶ್ ಗುಂಡೂರಾವ್ ಸಮಿತಿಯಲ್ಲಿದ್ದು, ಸಮನ್ವಯ ಅಧಿಕಾರಿಯಾಗಿ ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ.
ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಸಮನ್ವಯ ಅಧಿಕಾರಿಯಾಗಿ ನೇಮಕಗೊಂಡ ಸರಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಗಳೊಂದಿಗೆ ಸತತ ಸಂಪರ್ಕವಿಟ್ಟುಕೊಂಡು ಸಚಿವ ಸಂಪುಟದ ಉಪ ಸಮಿತಿಯು ಸಭೆಯನ್ನು ನಡೆಸುವ ನಿಟ್ಟಿನಲ್ಲಿ ಅಗತ್ಯ ನೆರವು ನೀಡಬೇಕು.
ಸಮಿತಿಯು ಬಯಸುವ ಎಲ್ಲ ಮಾಹಿತಿಗಳನ್ನು ತಪ್ಪದೆ ಒದಗಿಸಬೇಕು. ಈ ಸಭೆಗಳಲ್ಲಿ ವಿಭಾಗ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಎಲ್ಲ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ಉಪ ಸಮಿತಿಗೆ ಬೇಕಾಗುವ ಮಾಹಿತಿಯನ್ನು ಒದಗಿಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಿ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಆದೇಶ ಹೊರಡಿಸಿದ್ದಾರೆ.