×
Ad

ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ಬಳಿಕ ಸುಪ್ರೀಂಗೆ ಮೇಲ್ಮನವಿ

Update: 2016-04-22 23:02 IST

ಬೆಂಗಳೂರು, ಎ.22: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ರಲ್ಲಿ ನಡೆಸಿದ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಲಾಸೆಗೊಂಡ ಆರೋಪಿಗಳ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ಮೂರು ವರ್ಷಗಳ ಅವಧಿಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಖಲೀಲ್ ಅಹ್ಮದ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ.ಬಿ.ವೀರಪ್ಪ ಅವರಿದ್ದ ನ್ಯಾಯಪೀಠಕ್ಕೆ ಸರಕಾರ ಈ ಹೇಳಿಕೆ ನೀಡಿದೆ.
    ಅಲ್ಲದೆ, ಕೆಪಿಎಸ್ಸಿ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡುವ ಆದೇಶಗಳನ್ನು ಪಾಲಿಸುವುದಕ್ಕೆ ಸರಕಾರ ಬದ್ಧವಾಗಿದೆ ಎಂದು ವಿಚಾರಣೆ ವೇಳೆ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆದಿತ್ಯ ಸೋಂಧಿ ನ್ಯಾಯಾಲಯಕ್ಕೆ ತಿಳಿಸಿದರು.
 ಈ ಹಿಂದೆ ನಡೆದಿದ್ದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಖುಲಾಸೆಯಾಗಿರುವವರ ವಿರುದ್ಧ ಮೇಲ್ಮನವಿ ಸಲ್ಲಿಸುವರೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ನ್ಯಾಯಪೀಠ ಪ್ರಶ್ನಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸರಕಾರದ ಪರ ವಕೀಲರು, ಆರೋಪಿಗಳ ವಿರುದ್ಧ ಎಲ್ಲ ರೀತಿಯ ತನಿಖೆ ನಡೆಸಲಾಗಿತ್ತು. ಈ ಸಂಬಂಧ ಪ್ರಬಲ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದರೆ ಸಾಕಾಗುವುದಿಲ್ಲ. ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News