ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 45 ದಿನಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆ: ಸ್ಪಷ್ಟನೆ
ಮಡಿಕೇರಿ,ಎ.23: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಂದೂವರೆ ತಿಂಗಳಲ್ಲಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ಅವರು ತಿಳಿಸಿದ್ದಾರೆ. ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ಶನಿವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಬಹಿರಂಗ ವಿಚಾರಣೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಸಂಬಂಧಿಸಿದಂತೆ ಅಂತಿಮ ಹಂತದ ಸಿದ್ಧತೆಗಳು ನಡೆದಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಎರಡು ವಾರದಲ್ಲಿ ಸಂಪೂರ್ಣ ಮಾಹಿತಿ ದೊರೆಯಲಿದೆ.ಅಂತಿಮವಾಗಿ ಒಂದೂವರೆ ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಎಚ್.ಕಾಂತರಾಜು ಹೇಳಿದರು.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ಜಾತಿ ಜನಾಂಗಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲಾವಣೆಗೆ, ಪರ್ಯಾಯ ಪದ ಸೇರ್ಪಡೆಗೆ ಮತ್ತು ಕಾಗುಣಿತ ದೋಷ ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸುವ ಹಾಗೂ ಸ್ವೀಕರಿಸಿರುವ ಮನವಿಗಳ ಬಗ್ಗೆ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸುವ ಸಲುವಾಗಿ ಆಯಾಯ ಜಿಲ್ಲೆಗೆ ತೆರಳಿ ಮಾಹಿತಿ ಪಡೆಯಲಾಗುತ್ತಿದೆ ಎಂದು ಅವರು ವಿವರಿಸಿದರು. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳ ಸಂಬಂಧ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಕಿ ಅಂಶಗಳನ್ನು ಗಮನಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕಾಂತರಾಜು ಅವರು ತಿಳಿಸಿದರು. ಬಹಿರಂಗ ವಿಚಾರಣೆ ಹಾಗೂ ಸುದ್ದಿಗೋಷ್ಠಿಯಲ್ಲಿ ರಾಜ್ಯ ಹಿಂದುಳಿದ ವರ್ಗದ ಆಯೋಗದ ಸದಸ್ಯರಾದ ಜಿ.ಡಿ.ಗೋಪಾಲ, ಪ್ರೊ.ಎಂ.ಗುರುಲಿಂಗಯ್ಯ, ಧರ್ಮರಾಜು, ಶರಣಪ್ಪ ಡಿ.ಮಾನೇಗಾರ, ಕೆ.ಎನ್.ಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.