ಮಹಿಳೆ, ಮಕ್ಕಳ ಕಲ್ಯಾಣ ಯೋಜನೆ ಸಮರ್ಪಕ ಅನುಷ್ಠಾನವಾಗಲಿ: ಸಚಿವೆ ಉಮಾಶ್ರೀ
ಚಿಕ್ಕಮಗಳೂರು, ಎ.24: ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದೊಂದಿಗೆ ಪ್ರತಿಶತ ಶೇ.100ರಷ್ಟು ಕಾರ್ಯರೂಪಕ್ಕೆ ತರಬೇಕೆಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಸೂಚಿಸಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾ ಡಿದರು.
ಸರಕಾರ ವಿಶೇಷವಾಗಿ ಮಹಿಳೆಯರು ಸೇರಿದಂತೆ ಮಕ್ಕಳ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ. ಇವುಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಇತರ ಇಲಾಖೆಗಳ ಸಮನ್ವಯದೊಂದಿಗೆ ಜಾರಿಮಾಡಬೇಕು ಎಂದು ತಿಳಿಸಿದರು.
ಮಕ್ಕಳ ಪೌಷ್ಟಿಕತೆ ನೀಗಿಸಲು ನೀಡುತ್ತಿರುವ ಆಹಾರ ಪದಾರ್ಥವನ್ನು ಪರೀಕ್ಷಿಸಿ ನಂತರದಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ನಂತರ ಅಂಗನವಾಡಿಗಳಲ್ಲಿ ಅದರ ಗುಣಮಟ್ಟ ಪರಿಶೀಲಿಸಿ ಮಕ್ಕಳಿಗೆ ವಿತರಿಸಬೇಕು. ಆದರೆ ಜಿಲ್ಲೆಯಲ್ಲಿ ಸರಿಯಾಗಿ ಎರಡು ಬಾರಿ ಪರಿಶೀಲಿಸದೆ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ತಪ್ಪಿದ್ದಲ್ಲಿ ಕಾರಣ ಕೇಳಿ ನೋಟಿಸ್ ಜಾರಿಮಾಡಬೇಕು ಎಂದು ಇಲಾಖೆ ಜಂಟಿ ನಿರ್ದೇಶಕಿಗೆ ಎಂದು ಸೂಚಿಸಿದರು.
ಅಂಗನವಾಡಿಗಳಿಗೆ ಆಹಾರ ಪದಾರ್ಥ ಗಳನ್ನು ಸರಬರಾಜು ಮಾಡುವ ವಾಹನಗಳಿಗೆ ಜಿಪಿಆರ್‌ಎಸ್‌ಗಳನ್ನು ಅಳವಡಿಸುವುದು ಸೂಕ್ತ ಎಂದು ಸಲಹೆ ನೀಡಿದ ಅವರು, ಮಕ್ಕಳಿಗೆ ಆಹಾರ ಪದಾರ್ಥಗಳು ಸರಿಯಾಗಿ ಸರಬರಾಜು ಮಾಡಲಾಗುತ್ತಿದೆಯೇ ಎಂದು ಆಗಿಂದಾಗ್ಗೆ ಪರಿಶೀಲಿಸುತ್ತಿರಬೇಕು. ಸರಕಾರ ಪ್ರಸ್ತುತ ಸಾಲಿನಿಂದ ಕೆನೆ ಸಹಿತ ಹಾಲು ವಿತರಣೆ ಮಾಡಲು ಮುಂದಾಗಲಿದೆ. ಮುಂದಿನ ದಿನಗಳಲ್ಲಿ ತಮ್ಮಲ್ಲಿರುವ ಹಳೆ ದಾಸ್ತಾನು ಪೂರ್ಣ ಪ್ರಮಾಣದಲ್ಲಿ ಖಾಲಿ ಮಾಡಿದ ನಂತರ ಹೊಸ ಕೆನೆ ಸಹಿತ ಹಾಲು ವಿತರಿಸಬೇಕು ಸೂಚಿಸಿದರು.
ಜಿಲ್ಲೆಯ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ಎಚ್ಚರವಹಿಸಬೇಕು. ಅದರಲ್ಲಿಯೂ ವಿಶೇಷವಾಗಿ ನೀರಿನ ಸಂಪರ್ಕ ಹಾಗೂ ಶೌಚಾಲಯ ಇರಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಇಲಾಖೆಯಿಂದ ಸರಕಾರದ ಯೋಜನೆಗಳ ಜಾರಿಯಲ್ಲಿ ತೃಪ್ತಿ ಕಂಡುಬಂದಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಪಿ.ಷಡಕ್ಷರಿಸ್ವಾಮಿ, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್. ರಾಗಪ್ರಿಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.