×
Ad

ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ : ಎಂ.ಪಿ.ಅಪ್ಪಚ್ಚುರಂಜನ್‌

Update: 2016-04-24 21:58 IST

ಮಡಿಕೇರಿ, ಎ.24: ಗ್ರಾಮಗಳು ಅಭಿವೃದ್ಧಿಯಾದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ರಾಮರಾಜ್ಯ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಕಲ್ಯಾಣ ರಾಜ್ಯದ ಕನಸು ನನಸಾಗಲು ಸಾಧ್ಯ. ಆದ್ದರಿಂದ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್‌ರವರು ಹೇಳಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ರವಿವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮಗಳು ಅಭಿವೃದ್ಧಿಯಾದಲ್ಲಿ ರಾಷ್ಟ್ರದ ಪ್ರಗತಿ ನಿರೀಕ್ಷಿಸಲು ಸಾಧ್ಯ. 1973ರಲ್ಲಿ ಜಾರಿಗೊಳಿಸಲಾಗಿರುವ ಪಂಚಾಯತ್ ರಾಜ್ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಆವಶ್ಯಕ ಎಂದು ಶಾಸಕರು ಹೇಳಿದರು. ವಿಶ್ವದಲ್ಲೇ ಮಾದರಿ ಸಂವಿಧಾನವನ್ನು ಹೊಂದಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ಗ್ರಾಮಗಳ ಅಭಿವೃದ್ಧಿಯಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಗ್ರಾಮ ಸಮುದಾಯಗಳು ತಮ್ಮ ಗುರಿಯನ್ನು ತಾವೇ ನಿರ್ಧರಿಸಿಕೊಳ್ಳಲು ಪಂಚಾಯತ್‌ಗಳು ಪ್ರಯತ್ನಿಸಬೇಕು. ಕೇಂದ್ರ ಸರಕಾರ ಗ್ರಾಮ ಪಂಚಾಯತ್‌ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಬೇಕಿದೆ ಎಂದರು. ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ದಿನದ ಮಹತ್ವದ ಸಂದೇಶವನ್ನು ಪ್ರತಿ ಗ್ರಾಮೀಣ ಮಟ್ಟಕ್ಕೆ ತಲುಪಿಸಲು ಶ್ರಮಿಸುವಂತೆ ಅಪ್ಪಚ್ಚುರಂಜನ್ ಕರೆ ನೀಡಿದರು.

ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಮಾತನಾಡಿ, ರಾಜ್ಯದಲ್ಲಿ ಪಂಚಾಯತ್ ರಾಜ್ ಬಲಪಡಿಸಿದವರು ರಾಮಕೃಷ್ಣ ಹೆಗಡೆ ಮತ್ತು ನಝೀರ್ ಸಾಬ್ ಎಂದರೆ ತಪ್ಪಾಗಲಾರದು. ಆಡಳಿತ ಕೇಂದ್ರೀಕರಣದ ಉದ್ದೇಶದಿಂದ ಅಂದಿನ ದಿನಗಳಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಅವರು ಪ್ರಯತ್ನಿಸಿದರು ಎಂದು ಹೇಳಿದರು. ರಾಜ್ಯದಲ್ಲಿ ಹಿಂದೆ ಮಂಡಲ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಇತ್ತು. ಇಂದು ಗ್ರಾಪಂ, ತಾಪಂ ಮತ್ತು ಜಿಪಂಗಳನ್ನು ಕಾಣುತ್ತೇವೆ. ಈ ಎಲ್ಲ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳಿಗೆ ತಮ್ಮ ವ್ಯಾಪ್ತಿಯ ಕುಂದುಕೊರತೆ ಹಾಗೂ ಮೂಲಸೌಲಭ್ಯ ಕಲ್ಪಿಸುವ ಸಂಬಂಧ ಅಧಿಕಾರ ನೀಡಲಾಗಿದೆ. ಆದರೂ ಅಧಿಕಾರಿಗಳ ಬಳಿಗೆ ಎಡತಾಕುವುದು ತಪ್ಪಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ಅತೃಪ್ತಿ ವ್ಯಕ್ತಪಡಿಸಿದರು.

ಜಿಪಂ ಸಿಇಒ ಚಾರುಲತಾ ಸೋಮಲ್ ಅವರು ಮಾತನಾಡಿ, ಗ್ರಾಮೋದಯದಿಂದ ಭಾರತ ಉದಯ ಅಭಿಯಾನ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಪಂಚಾಯತ್ ರಾಜ್ ದಿನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಗ್ರಾಪಂ ಮತ್ತು ತಾಪಂಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 21,886 ಕುಟುಂಬಗಳು ಶೌಚಾಲಯ ಹೊಂದಿದ್ದು, 1,806 ಕುಟುಂಬಗಳು ಶೌಚಾಲಯ ಹೊಂದಿಲ್ಲದಿರುವುದು ಕಂಡುಬಂದಿದೆ. ಪ್ರಸಕ್ತ ವರ್ಷದಲ್ಲಿ 2,500 ಶೌಚಾಲಯ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ನೌಷದ್, ನಗರಸಭೆ ಅಧ್ಯಕ್ಷೆ ಬಂಗೇರಾ ಮೂರ್ನಾಡು ಜಿಪಂ ಕ್ಷೇತ್ರದ ಸದಸ್ಯೆ ಕಲಾವತಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News