ಎ.29ರಂದು ಜಿಲ್ಲೆಗೆ ಸಚಿವ ಸಂಪುಟದ ಉಪ ಸಮಿತಿ ಭೇಟಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್
ಮಡಿಕೇರಿ, ಎ.26: ಬರಪೀಡಿತ ಪ್ರದೇಶಗಳ ಅಧ್ಯಯನ ಮತ್ತು ಬರ ನಿರ್ವಹಣೆಯ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯು ಎ.29ರಂದು ಕೊಡಗು ಜಿಲ್ಲೆಗೆ ಆಗಮಿಸಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟಗಳ ಉಪ ಸಮಿತಿಯ ಸದಸ್ಯ ಕಾನೂನು ಹಾಗೂ ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕುಡಿಯುವ ನೀರು ಸಂಬಂಧ ಜಿಲ್ಲೆಯಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕಾಮಗಾರಿಗಳು, ಜಾನುವಾರುಗಳಿಗೆ ಮೇವು ದಾಸ್ತಾನು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡುವುದು ಸೇರಿದಂತೆ ಹಲವು ಮಾಹಿತಿಯನ್ನು ನೀಡುವಂತೆ ತಿಳಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ವಿವಿಧ ಗ್ರಾಪಂಗಳು ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಬೇಕಿದೆ. ಈ ಸಂಬಂಧ ಸಚಿವರುಗಳ ಗಮನಕ್ಕೆ ತರುವಂತಾಗಬೇಕು, ಹಾಗೆಯೇ ಸ್ಥಳೀಯ ಜನರ ಬೇಡಿಕೆ ಮತ್ತು ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡುವಂತೆ ಆಗಬೇಕೆಂದು ಅವರು ಸೂಚನೆ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಒಳಚರಂಡಿ ಯೋಜನೆ, ನೀರಿನ ಟ್ಯಾಂಕ್, ತೆರೆದ ಬಾವಿ ಹಾಗೂ ಬೋರ್‌ವೆಲ್‌ಗಳು ಮತ್ತಿತರ ಮಾಹಿತಿಗಳನ್ನು ಒದಗಿಸುವುದು ಮತ್ತು ಈವರೆಗಿನ ಅನುದಾನದ ಬಳಕೆಯ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಸಚಿವ ಸಂಪುಟ ಉಪ ಸಮಿತಿಗೆ ಒದಗಿಸುವಂತೆ ಅವರು ಹೇಳಿದರು. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಸಚಿವ ಸಂಪುಟದ ಉಪ ಸಮಿತಿ ಭೇಟಿ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ವಿವಿಧ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆಯಾಯ ತಾಲೂಕಿನ ತಹಶೀಲ್ದಾರ್ ಮತ್ತು ತಾಪಂ ಇಒ ಗಳು ಉಪ ವಿಭಾಗಾಧಿಕಾರಿ ಅವರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಸಚಿವ ಸಂಪುಟಗಳ ಉಪ ಸಮಿತಿ ಸದಸ್ಯರ ತಂಡವು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ. ವಿವಿಧ ಸ್ಥಳಗಳನ್ನು ವೀಕ್ಷಿಸುವ ಸಂದರ್ಭದಲ್ಲಿ ಅಧಿಕಾರಿ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಮತ್ತು ಸ್ಥಳಿಯ ಜನರ ಅಹವಾಲು ಸ್ವೀಕರಿಸಲು ಅಗತ್ಯ ನೆರವು ಮಾಡಿಕೊಳ್ಳುವಂತೆ ಅವರು ತಿಳಿಸಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಇಂಜಿನಿಯರ್ ಶಶಿಧರ, ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ತೊ. ಇಲಾಖೆಯ ಉಪ ನಿರ್ದೇಶಕ ಗಿರೀಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ನಾಗರಾಜು, ತಹಶೀಲ್ದಾರ್ ಕುಂಞಮ್ಮ, ಶಿವಪ್ಪ, ಮಹದೇವ ಸ್ವಾಮಿ, ತಾಪಂ ಸಿಇಒ ಸೋಮಶೇಖರ್, ಚಂದ್ರಶೇಖರ್, ಕೆ.ಆರ್, ಪಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.